
ಮೈಸೂರು: ಮೈಸೂರು ತಾಲೂಕಿನ ಕೀಳನಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಕಲಿಸು ಫೌಂಡೇಷನ್, ವೆಟೆಸ್ಕೋ ಟೆಕ್ನಾಲಜಿ ವತಿಯಿಂದ ನಿರ್ಮಾಣ ಮಾಡಿರುವ ೯೦ನೇ ಗ್ರಂಥಾಲಯ ಹಾಗೂ ಕಲಿಸಿ ಹೊರಾಂಗಣ ಆಟದ ಮೈದಾನಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ರಾಜ ವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಉದ್ಘಾಟಿಸಿದರು. ಈ ವೇಳೆ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮಾತನಾಡಿ, ವಿದ್ಯಾರ್ಥಿಗಳಿಗೆ ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಬಹಳ ಮುಖ್ಯ. ಈ ಹಂತದಲ್ಲಿ ಮಕ್ಕಳು ಹೆಚ್ಚಾಗಿ ಕಲಿಯುತ್ತಾರೆ. ಈ ನಿಟ್ಟಿನಲ್ಲಿ ಮಕ್ಕಳಲ್ಲಿ ಪ್ರೀತಿ, ವಿಶ್ವಾಸ, ಉತ್ತಮ ಮೌಲ್ಯವನ್ನು ಭಿತ್ತಬೇಕು ಎಂದು ಸಲಹೆ ನೀಡಿದರು.
ನಮಗೆ ಸರ್ಕಾರಿ ಕೆಲಸಬೇಕು, ಸರ್ಕಾರಿ ಸೌಲಭ್ಯಗಳು ಬೇಕು ಎಂದು ಬಯಸುತ್ತೇವೆ. ಆದರೆ, ನಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸುವುದಿಲ್ಲ. ಪತ್ರಿಯೊಬ್ಬ ಸರ್ಕಾರಿ ನೌಕರರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲು ಮಾಡಿದರೆ, ಅದರಷ್ಟಕ್ಕೇ ಪ್ರಗತಿ ಸಾಧಿಸಲಿದೆ ಎಂದು ಅಭಿಪ್ರಾಯಪಟ್ಟರು.
ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಾತನಾಡಿ, ಸರ್ಕಾರಿ ಶಾಲೆಗೆ ಖಾಸಗಿ ಸಂಘ, ಸಂಸ್ಥೆಗಳು ಕೈ ಜೋಡಿಸಿದರೆ ಯಾವ ರೀತಿ ಅಭಿವೃದ್ಧಿ ಮಾಡಬಹುದು ಎನ್ನುವುದಕ್ಕೆ ಇದು ಉದಾಹರಣೆ. ಈ ಕಾರ್ಯ ರಾಜ್ಯಕ್ಕೆ ಮಾದರಿಯಾಗಿದೆ. ವಿದ್ಯಾರ್ಥಿಗಳು ಸಂಪನ್ಮೂಲಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ಶಿಕ್ಷಣದಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ. ಕಳೆದ ಬಾರಿಯ ನನ್ನ ಅನುದಾನದಲ್ಲಿ ೧೧ ಕೋಟಿ ರೂ.ಗೂ ಹೆಚ್ಚು ಹಣವನ್ನು ಸರ್ಕಾರಿ ಶಾಲೆಯ ಉನ್ನತೀಕರಣಕ್ಕೆ ನೀಡಿದ್ದೇನೆ ಎಂದು ಮಾಹಿತಿ ನೀಡಿದರು.
ಶಾಸಕ ಎಚ್.ಎಂ.ಗಣೇಶ್ ಪ್ರಸಾದ್ ಮಾತನಾಡಿ, ಜಗತ್ತು ವೇಗವಾಗಿ ಬೆಳೆಯುತ್ತಿದೆ. ನಾವು ಅದಕ್ಕೆ ತಕ್ಕಂತೆ ಹೆಚ್ಚಿನ ಜ್ಞಾನ ಬೆಳೆಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಶಿಕ್ಷಣ ಬಹಳ ಮುಖ್ಯ ಎಂದು ಅಭಿಪ್ರಾಯಪಟ್ಟರು.
ಡಿಡಿಪಿಐ ರಾಮಚಂದ್ರರಾಜೇ ಅರಸ್ ಮಾತನಾಡಿ, ಸಣ್ಣ ಸರ್ಕಾರಿ ಶಾಲೆಯಲ್ಲಿ ಇದು ಐತಿಹಾಸಿಕ ಕಾರ್ಯಕ್ರಮ. ಮುಖ್ಯ ಶಿಕ್ಷಕರಾಗಿ ಮಾಲಂಗಿ ಸುರೇಶ್ ಅವರು ಬಂದ ಮೇಲೆ ಹಲವಾರು ಅಭಿವೃದ್ಧಿ ಕೆಲಸಗಳಾಗಿವೆ ಎಂದು ಮೆಚ್ಚುಗೆ ನುಡಿಗಳನ್ನಾಡಿದರು.
ಶಾಲೆಯ ಮುಖ್ಯ ಶಿಕ್ಷಕ ಮಾಲಂಗಿ ಸುರೇಶ್ ಮಾತನಾಡಿ, ಸರ್ಕಾರಿ ಶಾಲಾ ಮಕ್ಕಳ ಕಲಿಕೆಗೆ ಪೂರಕ ವಾತಾವರಣ ಕಲ್ಪಿಸಬೇಕು. ಖಾಸಗಿ ಶಾಲೆಯ ಮಕ್ಕಳಿಗೆ ಸಿಗುವ ವ್ಯವಸ್ಥೆ ನಮ್ಮ ಮಕ್ಕಳಿಗೂ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಗ್ರಂಥಾಲಯ, ಆಟದ ಮೈದಾನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ದಾನಿಗಳು ಶಾಲೆಗೆ ಕುಡಿಯುವ ನೀರಿನ ಬಾಟಲ್, ಕುಡಿಯುನ ನೀರಿನ ಟ್ಯಾಂಕ್, ಚೇರ್, ಡಯಾಸ್, ಕಂಪ್ಯೂಟರ್ ಹಾಗೂ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.
ಕಾರ್ಯಕ್ರಮದ ಅಂಗವಾಗಿ ಉಚಿತಾ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು. ಅಲ್ಲದೆ ಜೆಎಸ್‌ಎಸ್ ಸಂಚಾರ ಚಿಕಿತ್ಸಾ ವಾಹನಕ್ಕೆ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಬೆಂಗಳೂರಿನ ಜಯನಗರ ಶಾಸಕ ರಾಮಮೂರ್ತಿ, ಮೈಸೂರು ವಿಭಾಗದ ಹೆಚ್ಚುವರಿ ಪ್ರಾದೇಶಿಕ ಆಯುಕ್ತ ಪಿ.ಶಿವರಾಜು, ಜೆಎಸ್‌ಎಸ್ ಕಾಲೇಜಿನ ಮೆಡಿಕಲ್ ಸೂಪರಿಂಟೆಂಡೆಂಟ್ ಡಾ.ಮಧು, ಕಲಿಸು ಫೌಂಡೇಶನ್ ಸಂಸ್ಥಾಪಕ ಎಂ.ಎಂ.ನಿಖಿಲೇಶ್, ವಿಟಸ್ಕೋ ಟೆಕ್ನಾಲಜೀಸ್ ಇಂಡಿಯಾ ಪ್ರೈ.ಲಿ. ಮುಖ್ಯಸ್ಥ ಗಿರೀಶ್, ರಾಮಸ್ವಾಮಿ, ಆಲನಹಳ್ಳಿ ಪುಟ್ಟಸ್ವಾಮಿ ಮುಖಂಡ ಮಹದೇವಪ್ಪ ಇತರರು ಇದ್ದರು.