ಮೈಸೂರು: ಮತಾಂತರ ನಿಷೇಧ ಕಾಯ್ದೆ ಹಿಂಪಡೆಯುವ ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಸಿದ್ದಾರ್ಥನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಶುಕ್ರವಾರ ಪ್ರತಿಭಟಿಸಿದರು.
ಬಿಜೆಪಿ ಸರ್ಕಾರ ಅವಧಿಯಲ್ಲಿ ಜಾರಿಗೊಳಿಸಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ಕಾಂಗ್ರೆಸ್ ಸರ್ಕಾರ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಿಂದಕ್ಕೆ ಪಡೆದಿರುವುದು ಖಂಡನಿಯ. ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಇಲ್ಲಿ ಎಲ್ಲಾ ಜಾತಿ, ಧರ್ಮದ ಜನರು ಒಟ್ಟಿಗೆ ಜೀವನ ನಡೆಸುತ್ತಿದ್ದಾರೆ. ಆದರೆ, ಬಲವಂತದಿಂದ ಮತಾಂತರ ಮಾಡುವುದು ತಪ್ಪು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಯಾರೇ ಆದರೂ ಒಬ್ಬ ವ್ಯಕ್ತಿ ತನ್ನ ಸ್ವಇಚ್ಛೆಯಿಂದ ಅನುಸರಿಸುತ್ತಿರುವ ಧರ್ಮವನ್ನು ಇನ್ನೊಬ್ಬರ ಮೇಲೆ ಹೇರಬಾರದು. ಸಂವಿಧಾನ ಎಲ್ಲರಿಗೂ ಸಮಾನ ಅವಕಾಶ ನೀಡಿದೆ. ಮತಾಂತರ ನಿಷೇಧ ಕಾಯ್ದೆ ಹಿಂಪಡೆದರೆ ಈ ಆಶಯಕ್ಕೆ ಧಕ್ಕೆ ಉಂಟಾಗುತ್ತದೆ ಎಂದು ಅವರು ದೂರಿದರು.
ಪ್ರತಿಭಟನೆಯಲ್ಲಿ ಪರಿಷತ್‌ನ ಬಿ.ಎಸ್.ಪ್ರಶಾಂತ್, ಪದಾಧಿಕಾರಿಗಳು ಹಾಗೂ ಮುಖಂಡರು ಇದ್ದರು.