ಮೈಸೂರು: ಮಹಾರಾಣಿ ಕಾಲೇಜುಗಳಿಗೆ ಮೂಲ ಸೌಕರ್ಯ ಒದಗಿಸುವಂತೆ ಒತ್ತಾಯಿಸಿ ಎಐಡಿಎಸ್‌ಓ ವತಿಯಿಂದ ಪ್ರಾದೇಶಿಕ ಜಂಟಿ ನಿರ್ದೇಶಕಿ ಡಿ.ವಿಜಯಲಕ್ಷ್ಮಿ ಅವರಿಗೆ ಮನವಿ ಸಲ್ಲಿಸಲಾಯಿತು.
ಶತಮಾನೋತ್ಸವ ಪೂರೈಸಿರುವ ಮಹಾರಾಣಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಹಲವಾರು ಸಮಸ್ಯೆ ಎದುರಿಸುತ್ತಿದ್ದಾರೆ. ವಿದ್ಯಾರ್ಥಿಗಳ ಸಂಖ್ಯೆಗೆ ತಕ್ಕಂತೆ ಕೊಠಡಿಗಳಿಲ್ಲ. ಕುಸಿದು ಬಿದ್ದಿದ್ದ ರಸಾಯನಶಾಸ್ತ್ರ ಪ್ರಯೋಗಾಲಯದ ನವೀಕರಣ ಆರಂಭವಾಗಿಲ್ಲ. ವಿವಿಧ ಜಿಲ್ಲೆಗಳಿಂದ ಸಾವಿರಾರು ವಿದ್ಯಾರ್ಥಿನಿಯರು ಮಹಾರಾಣಿ ಕಲಾ, ವಾಣಿಜ್ಯ, ವಿಜ್ಞಾನ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಬಹುತೇಕ ವಿದ್ಯಾರ್ಥಿನಿಯರು ಬಡ ರೈತ ಕಾರ್ಮಿಕ, ಮಧ್ಯಮ ವರ್ಗದ ಮಕ್ಕಳು. ನೂರಾರು ಕಿಲೋಮೀಟರ್ ದೂರದಿಂದ ಬರುವ ವಿದ್ಯಾರ್ಥಿಗಳಿಗೆ ಸೂಕ್ತ ವಸತಿ ನಿಲಯದ ವ್ಯವಸ್ಥೆಯೇ ಇಲ್ಲವಾಗಿದೆ. ಎಷ್ಟೋ ವಿದ್ಯಾರ್ಥಿಗಳು ವಸತಿ ಸೌಲಭ್ಯವಿಲ್ಲದ ಕಾರಣ ಶಿಕ್ಷಣದಿಂದ ದೂರ ಉಳಿಯುವ ಪರಿಸ್ಥಿತಿ ಎದುರಾಗುತ್ತಿದೆ. ಮಹಾರಾಣಿ ವಾಣಿಜ್ಯ ಕಾಲೇಜಿಗೆ ಸಾರಿಗೆ ಬಸ್ ವ್ಯವಸ್ಥೆ ಇಲ್ಲದಿರುವುದರಿಂದ, ಎರಡು ಮೂರು ಕಿಲೋಮೀಟರ್ ನಡೆಯುವ ಪರಿಸ್ಥಿತಿ ಇದೆ. ಇಂತಹ ಸಮಸ್ಯೆಗಳಿಂದ ಮುಕ್ತಿಗೊಳಿಸಿ ಉತ್ತಮ ವ್ಯಾಸಂಗದ ವಾತಾವರಣ ನಿರ್ಮಾಣ ಮಾಡಬೇಕೆಂದು ಮನವಿ ಮಾಡಲಾಯಿತು.
ಬೇಡಿಕೆಗಳು: ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಕೊಠಡಿ ನಿರ್ಮಿಸಬೇಕು, ಕುಸಿದು ಬಿದ್ದಿದ್ದ ರಸಾಯನಶಾಸ್ತ್ರ ಪ್ರಯೋಗಾಲಯ ಪುನರ್ ನಿರ್ಮಿಸಬೇಕು, ಕಾಲೇಜಿನ ಆವರಣದೊಳಗೆ ಇಂದಿರಾ ಕ್ಯಾಂಟೀನ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸಬೇಕು, ಶೌಚಾಲಯ ಸ್ವಚ್ಛತೆ, ಕುಡಿಯುವ ನೀರು ಇನ್ನಿತರ ಮೂಲ ಸೌಕರ್ಯ ಒದಗಿಸಬೇಕು, ಮಹಾರಾಣಿ ವಾಣಿಜ್ಯ ಕಾಲೇಜಿಗೆ ಸೂಕ್ತ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿದರು.
ಜಿಲ್ಲಾಧ್ಯಕ್ಷ ಸುಭಾಷ್, ಕಾರ್ಯದರ್ಶಿ ಚಂದ್ರಕಲಾ, ವಿದ್ಯಾರ್ಥಿಗಳಾದ ಚಂದನ, ಚಂದ್ರಿಕಾ ಹಾಜರಿದ್ದರು.