
ಮೈಸೂರು: ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳ ಕಡೆಗೂ ವಿದ್ಯಾರ್ಥಿಗಳು ಗಮನ ಹರಿಸಬೇಕು. ಪ್ರಶ್ನೆ ಕೇಳಿ ತಿಳಿದು ಕೊಳ್ಳುವ ಗುಣ ವಿದ್ಯಾರ್ಥಿಗಳಲ್ಲಿರಬೇಕು ಎಂದು ನಟರಾಜ ಪ್ರತಿಷ್ಠಾನದ ವಿಶೇಷಾಧಿಕಾರಿ ಪ್ರೊ.ಎಸ್.ಶಿವರಾಜಪ್ಪ ತಿಳಿಸಿದರು.
ನಟರಾಜ ಮಹಿಳಾ ವಸತಿ ಪ್ರಥಮ ದರ್ಜೆ ಕಾಲೇಜಿನ ಉದ್ಯೋಗ ಕೋಶ ಘಟಕದ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ತಯಾರಿ ಎಂಬ ವಿಷಯದ ಕುರಿತು ಆಯೋಜಿಸಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾವು ಮಾಡುವ ಕೆಲಸ ಪರಿಪೂರ್ಣವಾಗಿದ್ದರೆ ನಮಗೆ ಪ್ರತಿಫಲ ಕಟ್ಟಿಟ್ಟ ಬುತ್ತಿ. ಮಾತಿನ ಕೌಶಲ, ಸಂವಹನ ಕಲೆ ವಿದ್ಯಾರ್ಥಿಗಳಲ್ಲಿರಬೇಕು. ಜ್ಞಾನಕ್ಕಿಂತ ಮಿಗಲಾದುದು ಯಾವುದು ಇಲ್ಲ ಎಂದು ತಿಳಿಸಿದರು.
ಧಾರವಾಡ ಗುರುದೇವ್ ಐಎಎಸ್, ಕೆಎಎಸ್, ಬ್ಯಾಂಕಿಂಗ್ ಅಕಾಡೆಮಿ ಆಡಳಿತಾಧಿಕಾರಿ ಆರ್.ಹೆಚ್.ಶಂಕರ್ ಮಾತನಾಡಿ, ಪದವಿ ಶಿಕ್ಷಣದ ನಂತರ ವಿದ್ಯಾರ್ಥಿಗಳ ಜವಾಬ್ದಾರಿ ಮತ್ತಷ್ಟು ಹೆಚ್ಚುತ್ತದೆ. ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ತಯಾರಿ ಮುಖ್ಯ. ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸವಿರಬೇಕು. ನಿರಂತರ ಪ್ರಯತ್ನದಿಂದ ಮಾತ್ರ ಗೆಲುವು ಸಾಧಿಸಲು ಸಾಧ್ಯ. ಆಧುನಿಕ ತಂತ್ರಜ್ಞಾನದ ಬಳಕೆಯನ್ನು ವಿದ್ಯಾರ್ಥಿಗಳು ಸರಿಯಾದ ರೀತಿಯಲ್ಲಿ ಮಾಡಿಕೊಳ್ಳಬೇಕು. ಮೊಬೈಲ್ ಬಳಕೆಯನ್ನು ಅವಶ್ಯಕತೆ ಇದ್ದಷ್ಟು ಮಾತ್ರ ಮಾಡಬೇಕು. ಪದವಿ ಶಿಕ್ಷಣ ಪಡೆದ ಮೇಲೆ ಹಲವು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆದು ಉತ್ತೀರ್ಣರಾಗಲು ಪ್ರಯತ್ನಿಸಬಹುದು ಎಂದರು.
ಸಂಪನ್ಮೂಲ ವ್ಯಕ್ತಿ ರವಿ ಅವರು ಯುಪಿಎಸ್‌ಸಿ, ಕೆಪಿಎಸ್‌ಸಿ, ಬ್ಯಾಂಕಿಂಗ್, ಏರ್‌ಪೋರ್ಸ್, ರೈಲ್ವೆ, ಪಿಡಿಒ, ಪಿಎಸ್‌ಐ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಸಂವಾದದ ಮೂಲಕ ವಿದ್ಯಾರ್ಥಿನಿಯರಿಗೆ ಹೆಚ್ಚಿನ ಮಾಹಿತಿ ನೀಡಿದರು.
ಕಾರ್‍ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲೆ ಡಾ.ಎಂ.ಶಾರದ, ಉಪ ಪ್ರಾಂಶುಪಾಲ ಡಾ.ಜಿ.ಪ್ರಸಾದಮೂರ್ತಿ, ಉದ್ಯೋಗಕೋಶದ ಸಂಚಾಲಕ ಡಾ.ಎನ್.ಜಿ.ಲೋಕೇಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.