Saturday, April 19, 2025
Google search engine

HomeUncategorizedಹಂಗಳ ಗ್ರಾಮಕ್ಕೆ ಪ್ರತ್ಯೇಕ ಬಸ್ ವ್ಯವಸ್ಥೆಗೆ ಒತ್ತಾಯಿಸಿ ಪ್ರತಿಭಟನೆ

ಹಂಗಳ ಗ್ರಾಮಕ್ಕೆ ಪ್ರತ್ಯೇಕ ಬಸ್ ವ್ಯವಸ್ಥೆಗೆ ಒತ್ತಾಯಿಸಿ ಪ್ರತಿಭಟನೆ

ಗುಂಡ್ಲುಪೇಟೆ: ತಾಲೂಕಿನ ಹಂಗಳ ಗ್ರಾಮದಲ್ಲಿ ಪ್ರತ್ಯೇಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ಸಾರಿಗೆ ಬಸ್ ತಡೆದು ಬುಧವಾರ ಪ್ರತಿಭಟನೆ ನಡೆಸಿದರು.

ತಾಲೂಕಿನ ಹಂಗಳ ಗ್ರಾಮದ ರಾಷ್ಟ್ರೀಯ ಹೆದ್ದಾರಿ-181ರಲ್ಲಿ ಸಂಚಾರ ಮಾಡುತ್ತಿದ್ದ ಸಾರಿಗೆ ಬಸ್ ಅಡ್ಡಲಾಗಿ ನಿಂತ ವಿದ್ಯಾರ್ಥಿಗಳು ಡಿಪೋ ವ್ಯವಸ್ಥಾಪಕರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಈ ವೇಳೆ ಮಾತನಾಡಿದ ಪ್ರತಿಭಟನಾನಿರತರು, ಹಂಗಳ ಗ್ರಾಮವು ಹೋಬಳಿ ಕೇಂದ್ರವಾಗಿದ್ದು, ನೂರಾರಾ ಮಂದಿ ವಿದ್ಯಾರ್ಥಿಗಳು ಪ್ರತಿನಿತ್ಯ ಗುಂಡ್ಲುಪೇಟೆ ಪಟ್ಟಣದಲಿರುವ ಶಾಲಾ-ಕಾಲೇಜಿಗೆ ತೆರಳುತ್ತಿದ್ದಾರೆ. ಆದರೆ ಈ ಮಾರ್ಗದಲ್ಲಿ ಸಂಚರಿಸುವ ಬಂಡೀಪುರ, ಕಲ್ಲಿಗೌಡನಹಳ್ಳಿ, ಗೋಪಾಲಪುರ ಬಸ್‍ಗಳ ಬೆಳಗ್ಗೆ 9 ಗಂಟೆ ಸಮಯದಲ್ಲಿ  ಆ ಭಾಗದಿಂದಲೇ ಪ್ರಯಾಣಿಕರನ್ನು ಅಧಿಕ ಸಂಖ್ಯೆಯಲ್ಲಿ ತುಂಬಿಕೊಂಡು  ಬರುತ್ತಿರುವ ಹಿನ್ನೆಲೆ ಹಂಗಳದಲ್ಲಿ ನಿಲುಗಡೆ ಮಾಡದೆ ತೆರಳುತ್ತಿವೆ. ಈ ಸಮಸ್ಯೆ ಹಲವು ತಿಂಗಳುಗಳಿಂದಲೂ ಇದೆ. ಈ ಕಾರಣದಿಂದ ನಿಗಧಿತ ಸಮಯಕ್ಕೆ ಶಾಲಾ-ಕಾಲೇಜುಗಳಿಗೆ ತೆರಳು ಸಾಧ್ಯವಾಗುತ್ತಿಲ್ಲ. ಈ ಬಗ್ಗೆ ಡಿಪೋ ವ್ಯವಸ್ಥಾಪಕರಿಗೆ ಹಲವು ಬಾರಿ ಮನವಿ ಮಾಡಿದ್ದರು ಕೂಡ ಪ್ರಯೋಜನವಾಗಿಲ್ಲ ಎಂದು ದೂರಿದರು.

ಹಂಗಳ ದೊಡ್ಡ ಗ್ರಾಮವಾಗಿದ್ದರೂ ಸಹ ಬಂಡೀಪುರ, ಕಲ್ಲಿಗೌಡನಹಳ್ಳಿ, ಗೋಪಾಲಪುರ ಮಾರ್ಗದಿಂದ ಬರುವ ಬಸ್‍ಗಳನ್ನೆ ಗ್ರಾಮಸ್ಥರು ಹಾಗು ವಿದ್ಯಾರ್ಥಿಗಳು ಅವಲಂಬಿಸಬೇಕಾಗಿದೆ. ಆದ್ದರಿಂದ ಗ್ರಾಮಕ್ಕೆ ಪ್ರತ್ಯೇಕವಾಗಿ ಬೆಳಗ್ಗೆ ಮತ್ತು ಸಂಜೆ ಶಾಲಾ-ಕಾಲೇಜು ಸಮಯದಲ್ಲಿ ಬಸ್ ವ್ಯವಸ್ಥೆಯನ್ನು ಡಿಪೋ ವ್ಯವಸ್ಥಾಪಕರು ಕಲ್ಪಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೆದ್ದಾರಿ ರಸ್ತೆ ತಡೆದು ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆ ಮಾಹಿತಿ ಅರಿತ ಪೊಲೀಸರು ಡಿಪೋ ವ್ಯವಸ್ಥಾಪಕರಿಗೆ ದೂರವಾಣಿ ಮೂಲಕ ತಿಳಿಸಿದ ಹಿನ್ನೆಲೆ ಹಂಗಳ ಗ್ರಾಮಕ್ಕೆ ಪ್ರತ್ಯೇಕ ಬಸ್ ಬಿಡಲಾಯಿತು. ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಕೈಬಿಟ್ಟರು. ಈ ಬಗ್ಗೆ ಡಿಪೋ ವ್ಯವಸ್ಥಾಪಕರು ಪ್ರತಿಕ್ರಿಯೆ ನೀಡಿ, ನಾಳೆಯಿಂದ ಹಂಗಳ ಗ್ರಾಮ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ 100ಕ್ಕೂ ಅಧಿಕ ವಿದ್ಯಾರ್ಥಿಗಳು ಸೇರಿದಂತೆ ರೈತ ಮುಖಂಡರು, ಗ್ರಾಮಸ್ಥರು ಹಾಜರಿದ್ದರು.

RELATED ARTICLES
- Advertisment -
Google search engine

Most Popular