ಬೆಂಗಳೂರು : ಮೈಸೂರನ್ನು ಯೋಗ ಜಿಲ್ಲೆಯನ್ನಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಕಳೆದ ಸಾಲಿನಲ್ಲಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇದೀಗ ಅದಕ್ಕೆ ಅನುಮೋದನೆ ದೊರೆತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಈ ಯೋಜನೆಗೆ ಕೇಂದ್ರ ಸರ್ಕಾರದಿಂದ ₹1 ಕೋಟಿ ಅನುದಾನ ಮಂಜೂರಾಗಿದ್ದು, ಆ ಹಣವನ್ನು ಬಳಸಿ ಮೈಸೂರಿನಲ್ಲಿ ಮನೆ-ಮನೆಗೂ ಯೋಗದ ಅರಿವು ತಲುಪಿಸುವ ಕಾರ್ಯ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಇನ್ನು ಈಗಾಗಲೇ ಘೋಷಿಸಿದಂತೆ “ಮೈಸೂರು ಯೋಗ ಹಬ್” ಕಾರ್ಯಕ್ರಮ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಇತರ ಜಿಲ್ಲೆಗಳಿಗೂ ಈ ಯೋಜನೆಯನ್ನು ವಿಸ್ತರಿಸುವ ಮಹತ್ವಾಕಾಂಕ್ಷೆಯ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.
ಲಭ್ಯವಿರುವ ಅನುದಾನವನ್ನು ಗ್ರಾಮೀಣ ಮಟ್ಟದಲ್ಲಿಯೂ ಪರಿಣಾಮಕಾರಿಯಾಗಿ ಬಳಸಿಕೊಂಡು ಯೋಗದ ಮಹತ್ವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಸಚಿವರು ಹೇಳಿದರು.



