ಬೆಂಗಳೂರು: ರಾಜ್ಯದ ೧೬೧ ತಾಲೂಕುಗಳಲ್ಲಿ ತೀವ್ರ ಮಳೆ ಕೊರತೆ ಎದುರಾಗಿದ್ದು, ಬರ ಘೋಷಣೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಿಫಾರಸು ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.
ವಿಧಾನಸೌಧದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಉಪ ಸಮಿತಿ ಸಭೆ ಚರ್ಚೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರದ ಮಾರ್ಗಸೂಚಿಯಂತೆ ೧೬೧ ತಾಲೂಕುಗಳು ಬರ ಘೋಷಣೆಗೆ ಅರ್ಹವಾಗಿದೆ. ಈ ಬಗ್ಗೆ ಇಂದು ನಡೆದ ಐದನೇ ಸಂಪುಟ ಉಪಸಮಿತಿ ಸಭೆಯಲ್ಲಿ ಸಂಬಂಧಿತ ಸಚಿವರು ಹಾಗೂ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಬರ ಘೋಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಿಫಾರಸು ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.
೬೨ ತಾಲೂಕುಗಳು ಕೇಂದ್ರ ಮಾರ್ಗಸೂಚಿಯಂತೆ ಬರ ಘೋಷಣೆಗೆ ಅರ್ಹ ಎಂಬ ತೀರ್ಮಾನಕ್ಕೆ ಬರಲಾಗಿತ್ತು. ಆದರೂ ಈ ವರ್ಷ ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಇದ್ದ ಕಾರಣಕ್ಕೆ ೧೩೪ ತಾಲೂಕುಗಳಲ್ಲಿ ಮತ್ತೊಂದು ಸುತ್ತಿನ ಬೆಳೆ ಸಮೀಕ್ಷೆ ಹಾಗೂ ಬೆಳೆ ಪರಿಶೀಲನೆಗೆ ಸೂಚಿಸಲಾಗಿತ್ತು. ಎಲ್ಲಾ ತಾಲೂಕುಗಳ ವರದಿಯೂ ನಿನ್ನೆ ಕೈಸೇರಿದ್ದು ಕೇಂದ್ರ ಸರ್ಕಾರದ ಬರ ಮಾರ್ಗಸೂಚಿಯಂತೆ ಒಟ್ಟಾರೆ ೧೬೧ ತಾಲೂಕುಗಳು ಬರ ಘೋಷಣೆಗೆ ಅರ್ಹವಾಗಿವೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.