ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಈ ಬಾರಿ ಮಾರ್ಚ್ 1ರಿಂದ 8 ರವರೆಗೆ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ʻಸರ್ವ ಜನಾಂಗದ ಶಾಂತಿಯ ತೋಟʼ ಈ ವರ್ಷದ ಚಲನಚಿತ್ರೋತ್ಸವದ ಥೀಮ್ ಆಗಿ ಆಯ್ಕೆ ಮಾಡಲಾಗಿದೆ. ಕಳೆದ ವರ್ಷ ʻಸಾಮಾಜಿಕ ನ್ಯಾಯʼ ಥೀಮ್ ನಲ್ಲಿ ಚಲನಚಿತ್ರೋತ್ಸವ ಆಯೋಜಿಸಲಾಗಿತ್ತು.
ಈ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜನೆ ಸಮಿತಿಯೊಂದಿಗೆ ಚರ್ಚೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಬಾರಿಯ ಚಲನಚಿತ್ರೋತ್ಸವದಲ್ಲಿ ಪ್ರತಿ ವರ್ಷ 60ಕ್ಕೂ ದೇಶಗಳಿಂದ ಬಂದ ಸುಮಾರು 200ಕ್ಕೂ ಅಧಿಕ ಚಲನಚಿತ್ರಗಳನ್ನು 13 ಚಿತ್ರಮಂದಿರಗಳಲ್ಲಿ, ಸುಮಾರು 400 ಪ್ರದರ್ಶನಗಳನ್ನು ಆಯೋಜಿಸಲಾಗುತ್ತಿದೆ.
ಒರಾಯನ್ ಮಾಲ್ ನಲ್ಲಿ 11 ಪ್ರದರ್ಶನಗಳಿರಲಿದ್ದು, ಸುಚಿತ್ರಾ ಫಿಲ್ಮಂ ಸೂಸೈಟಿ ಹಾಗೂ ಡಾ. ಅಂಬರೀಷ್ ಆಡಿಟೋರಿಯಂನಲ್ಲಿ ಒಂದೊಂದು ಪ್ರದರ್ಶನವಿರಲಿದೆ. ಪ್ರತಿ ಆವೃತ್ತಿಯಲ್ಲಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸುತ್ತಿದ್ದಾರೆ ಎಂದು ತಿಳಿಸಿದರು.
2006ರಲ್ಲಿ ಆರಂಭವಾದ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಇದೀಗ 16ನೇ ಆವೃತ್ತಿಗೆ ಪ್ರವೇಶಿಸುತ್ತಿದೆ. ಸುಮಾರು ರೂ. 9ಕೋಟಿ ವೆಚ್ಚದಲ್ಲಿ ಚಲನಚಿತ್ರೋತ್ಸವನ್ನು ಆಯೋಜಿಸಲಾಗುತ್ತಿದೆ. ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಅಂತಾರಾಷ್ಟ್ರೀಯ ಮನ್ನಣೆ ಪಡೆದಿದ್ದು, ಬೆಂಗಳೂರು ಭಾರತೀಯ ಮತ್ತು ಅಂತಾರಾಷ್ಟ್ರೀಯ ಸಿನೆಮಾ ಸಂಸ್ಕೃತಿಯ ಮುಖ್ಯಕೇಂದ್ರವಾಗಿ ಬೆಳೆದಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಚಲನಚಿತ್ರೋತ್ಸವದ ರಾಯಭಾರಿಯನ್ನು ಸಮಿತಿ ನಿರ್ಧರಿಸಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 1 ರಂದು ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಲಿದ್ದು, ಸಮಾರೋಪ ಸಮಾರಂಭದಲ್ಲಿ ರಾಜ್ಯಪಾಲರು ಪಾಲ್ಗೊಳ್ಳಲಿದ್ದಾರೆ. ಕನ್ನಡ ಚಿತ್ರರಂಗವನ್ನು ಪ್ರೋತ್ಸಾಹಿಸಲು ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಮೈಸೂರಿನಲ್ಲಿ ಫಿಲಂ ಸಿಟಿ ನಿರ್ಮಾಣಕ್ಕಾಗಿ 110 ಎಕರೆ ಜಮೀನನ್ನು ಈಗಾಗಲೇ ಮಂಜೂರು ಮಾಡಲಾಗಿದೆ. ಇದನ್ನು ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.