ಮಂಡ್ಯ: ಮಳವಳ್ಳಿ ತಾಲ್ಲೂಕಿನ ಟಿ.ಕಾಗೇಪುರದ ಗೋಕುಲ ವಿದ್ಯಾಸಂಸ್ಥೆಯ ಹಾಸ್ಟೆಲೊಂದರಲ್ಲಿ ಊಟ ಸೇವಿಸಿದ್ದ 29 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದು, ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಮೇಘಾಲಯದ ಮೂಲದ ಕೆರ್ಕಾಂಗ್ (13) ಎಂದು ಗುರುತಿಸಲಾಗಿದೆ.
ಮಳವಳ್ಳಿಯ ಉದ್ಯಮಿಯೊಬ್ಬರು ಶುಕ್ರವಾರ (ಮಾ.14) ಹೋಳಿ ಹಬ್ಬದ ಅಂಗವಾಗಿ ಆಯೋಜಿಸಿದ್ದ ಸಮಾರಂಭದಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭ ಉಳಿದ ಊಟವನ್ನು ಟಿ.ಕಾಗೇಪುರ ಗ್ರಾಮದ ಗೋಕುಲ ವಿದ್ಯಾಸಂಸ್ಥೆಯಲ್ಲಿದ್ದ 30 ಮಕ್ಕಳಿಗೆ ನೀಡಿದ್ದರು. ಅವರಲ್ಲಿ ಮೇಘಾಲಯ, ನೇಪಾಳ ಮೂಲದ 24 ಅನಾಥ ವಿದ್ಯಾರ್ಥಿಗಳಿಗೆ ಅನಾಥಾಶ್ರಮದ ಮಾದರಿಯಲ್ಲಿ ಶಿಕ್ಷಣ ನೀಡಲಾಗುತ್ತಿದೆ.
ಮೊದಲಿಗೆ ಶನಿವಾರ (ಮಾ.15) ಬೆಳಿಗ್ಗೆ ಕೆಲ ಮಕ್ಕಳು ಅಸ್ವಸ್ಥರಾಗಿದ್ದರು. ಅವರಿಗೆ ಸಮೀಪದ ತಳಗವಾದಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಮತ್ತು ಸಿಬ್ಬಂದಿಗಳು ಚಿಕಿತ್ಸೆ ನೀಡಿದ್ದರು. ಭಾನುವಾರ ಬೆಳಿಗ್ಗೆ ತೀವ್ರ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ತಕ್ಷಣವೇ ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಸ್ವಸ್ಥಗೊಂಡ ಮಕ್ಕಳಿಗೆ ತಾಲ್ಲೂಕು ವೈದ್ಯಾಧಿಕಾರಿ ಡಾ.ಪಿ.ವೀರಭದ್ರಪ್ಪ, ಸಾರ್ವಜನಿಕ ಆಸ್ಪತ್ರೆ ಆಡಳಿತಾಧಿಕಾರಿ ಡಾ.ಸಂಜಯ್ ನೇತೃತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಜಿಲ್ಲಾ ಆರೋಗ್ಯ ವೈದ್ಯಾಧಿಕಾರಿ ಡಾ.ಮೋಹನ್, ತಹಶೀಲ್ದಾರ್ ಎಸ್.ವಿ.ಲೋಕೇಶ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.
10ಕ್ಕೂ ಹೆಚ್ಚು ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಸ್ಥಳಾಂತರ ಮಾಡಲಾಗಿದೆ.
ಈ ಅನಾಹುತದ ಬಳಿಕ ಹೋಳಿ ಹಬ್ಬದ ಸಂದರ್ಭದಲ್ಲಿ ಊಟ ಸೇವಿಸಿದ್ದ 40ಕ್ಕೂ ಅಧಿಕ ಮಂದಿಯೂ ಸಹ ಅಸ್ವಸ್ಥರಾಗಿರುವ ಬಗ್ಗೆ ವರದಿಯಾಗಿದೆ. ಮೈಸೂರಿನ ಖಾಸಗಿ ಆಸ್ಪತ್ರೆ ಮತ್ತು ಕೆ.ಎಂ.ದೊಡ್ಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಊಟದಲ್ಲಿ ವಿಷಾಂಶ ಇತ್ತೇ ಎಂಬುದರ ಬಗ್ಗೆ ಅನುಮಾನ ವ್ಯಕ್ತವಾಗಿದ್ದು, ಗ್ರಾಮಾಂತರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.