ಉತ್ತರ ಪ್ರದೇಶ: ಇಲ್ಲಿನ ಫತೇಪುರದ ಸತ್ತಿ ಬಜಾರ್‌ನಲ್ಲಿ ಇಂದು ಮುಂಜಾನೆ ಮೂರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದಿದ್ದು ದುರಂತದಲ್ಲಿ ೪ ಮಂದಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದ್ದು, ಅನೇಕರು ಅವಶೇಷಗಳ ಅಡಿಯಲ್ಲಿ ಹೂತು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಬಾರಾಬಂಕಿ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಸಿಂಗ್, ಫತೇಪುರ ಪಟ್ಟಣದ ಸತ್ತಿ ಮಾರುಕಟ್ಟೆಯಲ್ಲಿ ೩ ಅಂತಸ್ತಿನ ಕಟ್ಟಡವೊಂದು ಇಂದು ಮುಂಜಾನೆ ೩ ಗಂಟೆ ವೇಳೆಗೆ ಏಕಾಏಕಿ ಕುಸಿದು ಬಿದ್ದಿದೆ. ವಿಷಯ ತಿಳಿದ ಕೂಡಲೇ ಸ್ಥಳೀಯರು ಪರಿಹಾರ ಹಾಗೂ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಪೊಲೀಸರಿಗೆ ಮಾಹಿತಿ ನೀಡಿದರು. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ರಕ್ಷಣಾ ಕಾರ್ಯ ಆರಂಭಿಸಿದ್ದಾರೆ.
ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳು ಸಹ ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ಪಾಲ್ಗೊಂಡಿವೆ. ಅವಶೇಷಗಳಡಿ ಹಲವರು ಹೂತು ಹೋಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಸದ್ಯಕ್ಕೆ ೧೨ ಜನರನ್ನು ರಕ್ಷಿಸಲಾಗಿದೆ” ಎಂದು ತಿಳಿಸಿದರು.
ಸ್ಥಳದಲ್ಲಿ ಭಾರಿ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಉನ್ನತ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.