ಬೆಂಗಳೂರು : ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ಶೇ.40 ಸಿಬ್ಬಂದಿ ಭರ್ತಿ ಮಾಡಲು ಹಣಕಾಸು ಇಲಾಖೆ ಜತೆಗೆ ಚರ್ಚೆ ನಡೆಸಲಾಗುತ್ತಿದೆ. ಶುಶ್ರೂಷಕರು, ತಂತ್ರಜ್ಞರನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿಗೆ ಮುಂದಿನ ತಿಂಗಳಲ್ಲಿ ಪ್ರಕ್ರಿಯೆ ನಡೆಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಗ್ರಾಮೀಣ ಜನರಿಗೆ ಸ್ಪೆಷಾಲಿಟಿ ಸೇವೆ ಒದಗಿಸುವ ನಿಟ್ಟಿನಲ್ಲಿ ತಾಲೂಕು ಆಸ್ಪತ್ರೆಗಳನ್ನು ಜಿಲ್ಲಾ ಆಸ್ಪತ್ರೆಗಳ ಮಟ್ಟಕ್ಕೆ ಮೇಲ್ದರ್ಜೆಗೇರಿಸಲು ಸರ್ಕಾರ ಸನ್ನದ್ಧವಾಗುತ್ತಿದೆ. ತಾಲೂಕು ಆಸ್ಪತ್ರೆಗಳನ್ನು ದೊಡ್ಡ ಮಟ್ಟದಲ್ಲಿ ಕಟ್ಟುವುದಲ್ಲ, ಬದಲಾಗಿ ತಜ್ಞ ವೈದ್ಯರ ನೇಮಕ, ಮೂಲಸೌಕರ್ಯ ಕಲ್ಪಿಸುವ ಮೂಲಕ ಗುಣಮಟ್ಟದ ಸೇವೆ ಒದಗಿಸಲು ಆರೋಗ್ಯ ಇಲಾಖೆ ಯೋಜನೆ ರೂಪಿಸುತ್ತಿದೆ ಎಂದು ಅವರು ತಿಳಿಸಿದರು.
ವೈದ್ಯರ ವೇತನವನ್ನು 1.10 ಲಕ್ಷದಿಂದ 1.40 ಲಕ್ಷ ರೂ.ವರೆಗೆ ಹಾಗೂ ಎಂಬಿಬಿಎಸ್ ವೈದ್ಯರ ವೇತನವನ್ನು 45 ರಿಂದ 60 ಸಾವಿರಕ್ಕೆ ಹೆಚ್ಚಿಸಲು ಚಿಂತಿಸಲಾಗಿದೆ. ಪ್ರತಿವರ್ಷ ವೈದ್ಯರ ಸೇವಾ ಅನುಭವ ಪರಿಗಣಿಸಿ ವೇತನ ಹೆಚ್ಚಳ ಮಾಡುವ ಯೋಜನೆಯೂ ಇದೆ. ಇದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಬೇಕಿದ್ದು, ಈ ಕುರಿತು ಡಿಸೆಂಬರ್ನಲ್ಲಿ ಸಭೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಿದರು.
ಈಗಾಗಲೇ ಎಎನ್ಎಂಗಳ ತ್ವರಿತ ನೇಮಕಕ್ಕೆ ಚರ್ಚೆಯಾಗಿದೆ. ತಜ್ಞ ವೈದ್ಯರು ಸೇರಿ 250 ವೈದ್ಯರ ನೇಮಕಾತಿಗೆ ಒಪ್ಪಿಗೆ ದೊರೆತಿದೆ. ವೇತನ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. 2025-26ನೇ ಸಾಲಿನ ಬಜೆಟ್ನಲ್ಲಿ ಅದಕ್ಕೆ ಅವಕಾಶ ಮಾಡಿಕೊಳ್ಳಲು ಆರೋಗ್ಯ ಇಲಾಖೆ ಪ್ರಸ್ತಾವನೆ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.