ಬೆಂಗಳೂರು:-ರಾಜ್ಯದ 667 ಸರ್ಕಾರಿ ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧುಬಂಗಾರಪ್ಪ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಸುಬ್ಬಾರೆಡ್ಡಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೋವಿಡ್ ಸಂದರ್ಭದಲ್ಲಿ ಪ್ರೌಢಶಾಲೆಯನ್ನು ಪದವಿಪೂರ್ವ ಕಾಲೇಜನ್ನಾಗಿ ಮೇಲ್ದರ್ಜೆಗೇರಿಸಲು ಸಾಧ್ಯವಾಗಿರಲಿಲ್ಲ. ಆದಷ್ಟು ಬೇಗ ಆದ್ಯತೆ ಮೇಲೆ ಪ್ರೌಢಶಾಲೆಗಳನ್ನು ಮೇಲ್ದರ್ಜೆಗೇರಿಸಲಾಗುವುದು ಎಂದರು.
361 ಸರ್ಕಾರಿ ಪ್ರೌಢಶಾಲೆಗಳನ್ನು ಸರ್ಕಾರಿ ಪದವಿಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸುವ ಪ್ರಸ್ತಾವನೆಯು ನಿರ್ದೇಶನಾಲಯದಿಂದ ಸ್ವೀಕೃತವಾಗಿದೆ. ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 4 ಪ್ರೌಢಶಾಲೆಗಳು ಪದವಿಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸುವ ಪ್ರಸ್ತಾವನೆಯಲ್ಲಿ ಸೇರಿವೆ ಎಂದರು.
ಜೆಡಿಎಸ್ ಶಾಸಕ ಸಿ.ಎನ್.ಬಾಲಕೃಷ್ಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿಗಳಿಂದ ಮಕ್ಕಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಆದ್ಯತೆ ಮೇಲೆ ತುರ್ತಾಗಿ ಶಾಲೆಗಳನ್ನು ದುರಸ್ತಿ ಮಾಡುತ್ತೇವೆ. ಮಲೆನಾಡು ಭಾಗದಲ್ಲಿ ಅತಿವೃಷ್ಟಿಯಿಂದ ಹೆಚ್ಚು ಶಾಲೆಗಳಿಗೆ ತೊಂದರೆಯಾಗಿದೆ ಎಂದರು.
ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದಲ್ಲಿ 38 ಸರ್ಕಾರಿ ಪ್ರಾಥಮಿಕ ಶಾಲೆಗಳ 68 ಕೊಠಡಿಗಳು, ಒಂದು ಸರ್ಕಾರಿ ಪ್ರೌಢಶಾಲೆಯ 3 ಕೊಠಡಿಗಳು ದುರಸ್ತಿಯಾಗಬೇಕಿದೆ. 2022-23ನೇ ಸಾಲಿನಲ್ಲಿ 15 ಶಾಲೆಗಳ 15 ಕೊಠಡಿಗಳ ದುರಸ್ತಿಗೆ 30 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.