ಬೆಂಗಳೂರು: ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ನಗರದ ಕಂಠೀರವ ಸ್ಟೇಡಿಯಂನಲ್ಲಿ ಇಂದು ಹಮ್ಮಿಕೊಂಡಿರುವ ೬೮ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದರು. ರಾಜ್ಯೋತ್ಸವ ಆಚರಣೆ ಕಾರ್ಯಕ್ರಮ ಇರುವ ಹಿನ್ನೆಲೆಯಲ್ಲಿ ನಗರ ಸಂಚಾರ ಪೊಲೀಸರು ಕ್ರೀಡಾಂಗಣದ ಸುತ್ತಮುತ್ತಲಿನ ಕೆಲವು ರಸ್ತೆಗಳಲ್ಲಿ ವಾಹನ ನಿಲುಗಡೆಗೆ ನಿರ್ಬಂಧ ಹೇರಿದ್ದಾರೆ. ಸಮಾರಂಭಕ್ಕೆ ಅನೇಕ ಮಂದಿ ಆಗಮಿಸಿರುವುದರಿಂದ ಕ್ರೀಡಾಂಗಣದ ಸುತ್ತಮುತ್ತ ಬಿಗಿ ಭದ್ರತೆ ಕಲ್ಪಿಸಲಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ವಹಿಸಿದ್ದು, ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್, ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಮತ್ತು ಬೆಂಗಳೂರು ಉಸ್ತುವಾರಿ ಸಚಿವರಾದ ಡಿ.ಕೆ.ಶಿವಕುಮಾರ್, ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಎಂ.ಚಂದ್ರಶೇಖರ್ ಮತ್ತು ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್ ಸೇರಿದಂತೆ ಅನೇಕರು ಪಾಲ್ಗೊಂಡಿದ್ದಾರೆ.