ಧಾರವಾಡ:ರಾಜ್ಯ ಸರ್ಕಾರವು ನುಡಿದಂತೆ ನಡೆದಿದ್ದು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಎಲ್ಲ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ರಾಜ್ಯದ ಜನತೆಗೆ ತಲುಪಿಸುವಲ್ಲಿ ಬಹು ಮುಖ್ಯ ಪಾತ್ರವನ್ನು ವಹಿಸಿದ್ದು, ಜನರ ಪ್ರೀತಿಗೆ ಪಾತ್ರರಾಗಿದ್ದಾರೆ. ಸಮಸ್ತ ನಾಡಿನ ಜನತೆಯ ಪರವಾಗಿ ಈ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳನ್ನು ಅಭಿನಂದಿಸುತ್ತೇನೆ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್ ಅವರು ಹೇಳಿದರು.
ಅವರು ಇಂದು ಬೆಳಿಗ್ಗೆ ನಗರದ ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಧಾರವಾಡ ಜಿಲ್ಲಾಡಳಿತ ಆಯೋಜಿಸಿದ್ದ 75ನೇ ಗಣರಾಜ್ಯೋತ್ಸವದ ಅಂಗವಾಗಿ ರಾಷ್ಟಪಿತ ಮಹತ್ಮಾ ಗಾಂಧಿಜೀ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಪಣೆ ಮಾಡಿ, ರಾಷ್ಟ್ರಧ್ವಜಾರೋಹಣ ನೇರವೆರಿಸಿ, ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.
ಜನಪರ ಯೋಜನೆಗಳಾದ ಶಕ್ತಿ ಯೋಜನೆ, ಗೃಹ ಲಕ್ಷ್ಮಿ ಯೋಜನೆ, ಗೃಹ ಜ್ಯೋತಿ ಯೋಜನೆ, ಅನ್ನಭಾಗ್ಯ ಯೋಜನೆ ಹಾಗೂ ಯುವನಿಧಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಶಕ್ತಿ ಯೋಜನೆಯಡಿ ಧಾರವಾಡ ಜಿಲ್ಲೆಯಲ್ಲಿ ಇಲ್ಲಿಯವರೆಗೂ 6.87 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದು, ರೂ.139.64 ಕೋಟಿ ಮೊತ್ತದ ಸೇವೆಯನ್ನು ಪಡೆದಿರುತ್ತಾರೆ ಎಂದು ಅವರು ಹೇಳಿದರು.
ಗೃಹಲಕ್ಷ್ಮೀ ಯೋಜನೆಯಡಿ 3,43,528 ಮಹಿಳೆಯರಿಗೆ ರೂ.68.70 ಕೋಟಿಯನ್ನು ವಿತರಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ ಡಿಸೆಂಬರ್ ಅಂತ್ಯಕ್ಕೆ 4,76,091 ಗೃಹ ಬಳಕೆದಾರರು ಈ ಯೋಜನೆಯ ಪ್ರಯೊಜನ ಪಡೆದಿರುತ್ತಾರೆ. ಅನ್ನಭಾಗ್ಯ ಯೋಜನೆಯಡಿ 3,86,212 ಕುಟುಂಬಗಳಿಗೆ ರೂ.109 ಕೋಟಿಗಳನ್ನು ವಿತರಿಸಲಾಗಿದೆ. ರಾಜ್ಯ ಸರ್ಕಾರದ ಯುವ ನಿಧಿ ಯೋಜನೆಗೆ ಧಾರವಾಡ ಜಿಲ್ಲೆಯಲ್ಲಿ ಈವರೆಗೆ ಸುಮಾರು 2,580 ಜನ ಅಭ್ಯರ್ಥಿಗಳು ನೋಂದಾಯಿತರಾಗಿದ್ದಾರೆ ಎಂದು ಸಚಿವರು ತಿಳಿಸಿದರು.
ಕೃತಕ ಬುದ್ಧಿಮತ್ತೆ ಹಾಗೂ ಆಧುನಿಕ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಹುಬ್ಬಳ್ಳಿ ಕಿಮ್ಸ್‍ನಲ್ಲಿ ಹೊಸ ಟೆಲಿ ಐ.ಸಿ.ಯು. ಹಬ್‍ನ್ನು ಸ್ಥಾಪಿಸಲಾಗಿದೆ. ಧಾರವಾಡ ಜಿಲ್ಲೆಯ ಅಭಿವೃದ್ಧಿಗಾಗಿ ಜಿಲ್ಲಾ ಪಂಚಾಯತಿ ವತಿಯಿಂದ 2023-24ನೇ ಸಾಲಿನಲ್ಲಿ ಈವರೆಗೂ ರೂ. 695 ಕೋಟಿಗಳನ್ನು ವೆಚ್ಚ ಮಾಡಲಾಗಿದೆ. ಜಿಲ್ಲೆಯಾದ್ಯಂತ ಪ್ರತಿ ತಾಲ್ಲೂಕಿಗೆ ಒಂದು ಪಶು ಸಂಜೀವಿನಿ ಆಂಬ್ಯುಲೆನ್ಸ್‍ನ್ನು ಒದಗಿಸಲಾಗಿದೆ. ಸಾರ್ವಜನಿಕರು 1962 ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ, ಪಶು ಸಂಜೀವಿನಿ ಆಂಬ್ಯುಲೆನ್ಸ್ ಸೇವೆಯನ್ನು ಪಡೆಯಬಹುದು ಎಂದು ಸಚಿವ ಸಂತೋಷ ಲಾಡ್ ತಿಳಿಸಿದರು.
ಮಳೆಯ ಕೊರತೆಯಿಂದಾಗಿ ಜಿಲ್ಲೆಯ ಎಲ್ಲಾ 8 ತಾಲ್ಲೂಕುಗಳನ್ನು ತೀವ್ರ ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದೆ. ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಇಲ್ಲಿಯವರೆಗೆ ರೂ, 16 ಕೋಟಿಗಳಷ್ಟು ವೆಚ್ಚ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.
ರಾಜ್ಯದಲ್ಲಿರುವ ಸುಮಾರು 40 ಲಕ್ಷ ಮೋಟಾರು ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸಲು ಕಾರ್ಮಿಕ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗಿದ್ದು, ವಾರ್ಷಿಕ ರೂ.250 ಕೋಟಿಗಳ ಅನುದಾನವನ್ನು ಒದಗಿಸಲಾಗುವುದೆಂದು ಸಚಿವರು ಹೇಳಿದರು.

ಗಣರಾಜ್ಯೋತ್ಸವದ ಐತಿಹಾಸಿಕ ಮೆಲುಕು: ದೇಶದ ಇತಿಹಾಸದಲ್ಲಿ ಆಗಸ್ಟ್ 15 ಮತ್ತು ಜನವರಿ 26 ಅತ್ಯಂತ ಪ್ರಮುಖ ದಿನಗಳಾಗಿವೆ. ಇವೆರಡೂ ದಿನಗಳನ್ನು ನಾವೆಲ್ಲರೂ ರಾಷ್ಟ್ರೀಯ ಹಬ್ಬಗಳಾಗಿ ಸಡಗರದಿಂದ ಆಚರಿಸುತ್ತೇವೆ. ಆದರಲ್ಲೂ 1950ರ ಜನವರಿ 26 ಮೂರು ಮುಖ್ಯ ಘಟನೆಗೆ ಸಾಕ್ಷಿಯಾಗಿದೆ.
ಭಾರತ ದೇಶವನ್ನು ಗಣರಾಜ್ಯವೆಂದು ಘೋಷಿಸಲಾಯಿತು. ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಭಾರತದ ಸಂವಿಧಾನ ಜಾರಿಗೊಳಿಸಲಾಯಿತು. ಸಾರಾನಾಥದಲ್ಲಿರುವ ಅಶೋಕನ ಕಾಲದ ಸಿಂಹ ಶಿಖರವನ್ನು “ಸತ್ಯಮೇವ ಜಯತೆ” ಅನ್ನು ರಾಷ್ಟ್ರ ಲಾಂಛನವನ್ನಾಗಿ ಮಾಡಲಾಯಿತು.