ಬೆಂಗಳೂರು: ಬಿಸಿಲಿನ ತಾಪದಿಂದ ಜನ ಸಾಮಾನ್ಯರು ತತ್ತರಿಸುತ್ತಿರುವ ನಡುವೆ ಮಾರ್ಚ್ 15ರಿಂದ 17ರವರೆಗೆ ರಾಜ್ಯದ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾ.15ರಂದು ದಕ್ಷಿಣ ಕನ್ನಡ, ಕೊಡಗು, ಮೈಸೂರು, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ಕೆಲವೆಡೆ ತುಂತುರು ಮಳೆಯಾಗುವ ನಿರೀಕ್ಷೆಯಿದೆ. ಮಾ.16ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾವೇರಿ, ಗದಗ, ಧಾರವಾಡ, ಕೊಪ್ಪಳ ಸೇರಿದಂತೆ ಶಿವಮೊಗ್ಗ, ಚಿಕ್ಕಮಗಳೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ನಗರ-ಗ್ರಾಮಾಂತರ ಜಿಲ್ಲೆಗಳಲ್ಲಿ ಹಗುರ ಮಳೆಯಾಗಬಹುದು.
ಇನ್ನೂ ಕೆಲವು ಉತ್ತರ ಹಾಗೂ ಮಧ್ಯ ಕರ್ನಾಟಕ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಮಾ.17ರಂದು ದಕ್ಷಿಣ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.



