ಮಂಡ್ಯ: 2026ರ ಸಾಲಿನ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವವು ಮಾರ್ಚ್ 23ರಿಂದ ಏಪ್ರಿಲ್ 4 ರವರೆಗೆ ನಡೆಯಲಿದೆ. ಈ ಉತ್ಸವದ ಪ್ರಮುಖ ಆಕರ್ಷಣೆಯಾದ ವೈರಮುಡಿ ಕಿರೀಟ ಧಾರಣೆಯು ಮಾರ್ಚ್ 28 ರಂದು ಜರುಗಲ್ಲಿದ್ದು ವೈರಮುಡಿ ಉತ್ಸವದಲ್ಲಿ ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೂಚಿಸಿದರು.
ಮಂಡ್ಯ ಜಿಲ್ಲೆಯ ಮೇಲುಕೋಟೆಯಲ್ಲಿ ನಡೆಯಲಿರುವ ವಿಶ್ವಪ್ರಸಿದ್ಧ ವೈರಮುಡಿ ಬ್ರಹ್ಮೋತ್ಸವದ ಪೂರ್ವ ಸಿದ್ಧತಾ ಸಭೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ನೇತೃತ್ವದಲ್ಲಿ ನಡೆಸಲಾಯಿತು.
ಉತ್ಸವದಲ್ಲಿ ಯಾವುದೇ ಲೋಪದೋಷಗಳಾಗದಂತೆ, ಭಕ್ತರಿಗೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲು ಮತ್ತು ಬಿಗಿ ಭದ್ರತೆ ಒದಗಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ವೈರಮುಡಿ ಉತ್ಸವದಲ್ಲಿ ಲಕ್ಷಾಂತರ ಭಕ್ತಾದಿಗಳು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಭಕ್ತರಿಗೆ ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯ ಕಲ್ಪಿಸುವುದರ ಜತೆಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳು ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು ಎಂದು ತಿಳಿಸಿದರು.
ಪೊಲೀಸ್ ಇಲಾಖೆಯವರು ವೈರಮುಡಿ ಬ್ರಹ್ಮೋತ್ಸವದಲ್ಲಿ ಕಿರೀಟಧಾರಣಾ ಮೆರವಣಿಗೆಯ ಸಂದರ್ಭದಲ್ಲಿ ಶಾಂತಿಯುತವಾಗಿ ಹಾಗೂ ಸಮಾಧಾನವಾಗಿ ಜನರು ದೇವರು ನೋಡವಂತೆ ಅಗತ್ಯ ವ್ಯವಸ್ಥೆ ಮಾಡಬೇಕು. ಈ ಸಂಬಂಧ ದೇವಸ್ಥಾನದ ಅರ್ಚಕರೊಂದಿಗೆ ಸಭೆ ನಡೆಸಿ ಶಾಂತಿಯುತವಾಗಿ ನಡೆಯಯಲು ಅಗತ್ಯ ಸಿದ್ಥತೆ ಮಾಡಿಕೊಳ್ಳಿ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದರು.
ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣಯ್ಯ ಮಾತನಾಡಿ, ಭಕ್ತರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ. ವೈರಮುಡಿ ಉತ್ಸವದಲ್ಲಿ ಜನಸಂದಣಿಯಾಗದಂತೆ ಬ್ಯಾರಿಕೇಡಿಂಗ್ ಆಗಬೇಕು ಎಂದು ತಿಳಿಸಿದರು.
ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಭಕ್ತಾದಿಗಳಿಗೆ ಅಗತ್ಯವಿರುವ ಕುಡಿಯುವ ನೀರು, ಶೌಚಾಲಯ, ಪಾರ್ಕಿಂಗ್ ಮತ್ತು ಸಂಚಾರ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.
ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿರುವುದರಿಂದ ಆರೋಗ್ಯ ಸೇವೆಗಳು, ಸಾರಿಗೆ ವ್ಯವಸ್ಥೆ (ಕೆ.ಎಸ್.ಆರ್.ಟಿ.ಸಿ ಬಸ್ಗಳು) ಮತ್ತು ಬಿಗಿ ಪೊಲೀಸ್ ಬಂದೋಬಸ್ತ್ಗೆ ಸಭೆಯಲ್ಲಿ ಆದ್ಯತೆ ನೀಡಲಾಗಿದೆ ಎಂದು ಸಭೆಯಲ್ಲಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ವಿ.ಜೆ. ಶೋಭಾರಾಣಿ, ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ಪಾಂಡವಪುರ ಉಪವಿಭಾಗಾಕಾರಿ ಶ್ರೀನಿವಾಸ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.



