ಮೈಸೂರು : ಹುಸಿಬಾಂಬ್ ಬೆದರಿಕೆ ಸಂದೇಶಗಳನ್ನು ಕಳುಹಿಸಿ ಸರ್ಕಾರಿ ಕಚೇರಿಗಳು, ಶಾಲೆಗಳು ಹಾಗೂ ನ್ಯಾಯಾಲಯಗಳಲ್ಲಿ ಆತಂಕ ಸೃಷ್ಟಿಸುತ್ತಿದ್ದ ವ್ಯಕ್ತಿಯನ್ನು ದೆಹಲಿ ಪೊಲೀಸರು ಮೈಸೂರಿನಲ್ಲಿ ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ.
ಬಂಧಿತನನ್ನು ಮೈಸೂರಿನ ಬೃಂದಾವನ ಬಡಾವಣೆ ಎರಡನೇ ಹಂತ, 6ನೇ ಕ್ರಾಸ್‌ನ ನಿವಾಸಿ ಶ್ರೀನಿವಾಸ್ ಎಂದು ಗುರುತಿಸಲಾಗಿದ್ದು, ಆತ ಮೈಸೂರಿನಲ್ಲಿ ಅಡಗಿ ಕುಳಿತು ನಿಗೂಢವಾಗಿ ಬಾಂಬ್ ಸ್ಫೋಟಿಸುವ ಬಗ್ಗೆ ಬೆದರಿಕೆ ಸಂದೇಶಗಳನ್ನು ಇ-ಮೇಲ್ ಮೂಲಕ ಕಳುಹಿಸುತ್ತಿದ್ದನು ಎಂದು ತನಿಖೆಯಿಂದ ತಿಳಿದುಬಂದಿದೆ.
ಇತ್ತೀಚಿನ ದಿನಗಳಲ್ಲಿ ವಿವಿಧ ಸರ್ಕಾರಿ ಕಚೇರಿಗಳು, ಶಾಲಾ ಕಟ್ಟಡಗಳು ಹಾಗೂ ನ್ಯಾಯಾಲಯಗಳಿಗೆ ಬಾಂಬ್ ಸ್ಫೋಟದ ಬೆದರಿಕೆ ಸಂದೇಶಗಳು ರವಾನೆಯಾಗುತ್ತಿದ್ದವು. ಇದರಿಂದ ಸಾರ್ವಜನಿಕರಲ್ಲಿ ಭಾರೀ ಆತಂಕ ಉಂಟಾಗಿದ್ದು, ಒಂದೇ ತಿಂಗಳೊಳಗೆ ಹಲವು ಬಾರಿ ಇಂತಹ ಹುಸಿ ಸಂದೇಶಗಳನ್ನು ಕಳುಹಿಸಿರುವುದು ಪ್ರಕರಣವನ್ನು ಇನ್ನಷ್ಟು ಗಂಭೀರವಾಗಿಸಿದೆ.
ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು, ಪ್ರಕರಣದ ತನಿಖೆಯನ್ನು ವೇಗಗೊಳಿಸಲು ಸೂಚನೆ ನೀಡಿದ್ದವು. ತಾಂತ್ರಿಕ ಮಾಹಿತಿಗಳ ಆಧಾರದ ಮೇಲೆ ತನಿಖೆ ನಡೆಸಿದ ದೆಹಲಿ ಪೊಲೀಸರು, ಈ ಸಂದೇಶಗಳ ಮೂಲ ಮೈಸೂರು ನಗರದಿಂದಲೇ ಬರುತ್ತಿದೆ ಎಂಬುದನ್ನು ಪತ್ತೆಹಚ್ಚಿದರು. ಈ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರ ವಿಶೇಷ ತಂಡ ಮೈಸೂರಿಗೆ ಆಗಮಿಸಿ, ವಿವಿ ಪುರಂ ಪೊಲೀಸ್ ಠಾಣೆ ಪೊಲೀಸರ ಸಹಕಾರದೊಂದಿಗೆ ಆರೋಪಿಯ ಮನೆಯ ಮೇಲೆ ಧಿಡೀರ್ ದಾಳಿ ನಡೆಸಿತು. ದಾಳಿಯ ವೇಳೆ ಶ್ರೀನಿವಾಸ್ ಅನ್ನು ಬಂಧಿಸಲಾಯಿತು.
ಆರೋಪಿಯ ಮನೆಯಲ್ಲಿ ಶೋಧ ನಡೆಸಿದ ವೇಳೆ ಹಲವು ಸಿಮ್ ಕಾರ್ಡ್‌ಗಳು ಹಾಗೂ ಲ್ಯಾಪ್‌ಟಾಪ್ ವಶಪಡಿಸಿಕೊಳ್ಳಲಾಗಿದ್ದು, ಇವುಗಳ ಮೂಲಕವೇ ಆತ ಬೆದರಿಕೆ ಸಂದೇಶಗಳನ್ನು ಕಳುಹಿಸುತ್ತಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.
ಬಂಧಿತನನ್ನು ಹೆಚ್ಚಿನ ವಿಚಾರಣೆಗಾಗಿ ದೆಹಲಿಗೆ ಕರೆದೊಯ್ಯಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಪ್ರಕರಣದ ಹಿಂದಿನ ಉದ್ದೇಶ, ಇತರರ ಸಂಪರ್ಕ ಹಾಗೂ ಯಾವುದೇ ಸಂಘಟನೆಯ ಸಂಪರ್ಕವಿದೆಯೇ ಎಂಬುದರ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದು, ಈ ಘಟನೆ ಮೈಸೂರಿನಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಅಲ್ಲದೆ ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ಪೊಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.



