ಮಂಡ್ಯ : ರಾಜ್ಯದ ಪ್ರಮುಖ ರೈಲ್ವೆ ಯೋಜನೆಗಳ ವಿಚಾರವಾಗಿ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಕನಕಪುರ-ಮಳವಳ್ಳಿ ರೈಲ್ವೆ ಮಾರ್ಗಕ್ಕೆ ರಾಜ್ಯ ಸರ್ಕಾರ ಸಹಕಾರ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಂಡ್ಯದಲ್ಲಿ ಇಂದು ರೈಲ್ವೆ ಯೋಜನೆಗಳ ಕುರಿತು ಮಾತನಾಡಿದ ಸೋಮಣ್ಣ, ನಾವು ಅಧಿಕಾರಕ್ಕೆ ಬಂದ ತಕ್ಷಣವೇ ಕನಕಪುರ-ಮಳವಳ್ಳಿ ರೈಲ್ವೆ ಮಾರ್ಗದ ಯೋಜನೆಯನ್ನು ಕೈಗೆತ್ತಿಕೊಂಡೆವು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರಕ್ಕೆ ಪತ್ರ ಬರೆದು, ನಮ್ಮ ಹತ್ತಿರ ಹಣವಿಲ್ಲ, ಈ ಪ್ರಾಜೆಕ್ಟ್ ಬೇಡ ಎಂದು ತಿಳಿಸಿದ್ದಾರೆ ಎಂದು ಸ್ಫೋಟಕ ಆರೋಪ ಮಾಡಿದರು.
ಅಲ್ಲದೆ, ರಾಜ್ಯ ಸರ್ಕಾರದ ಈ ಧೋರಣೆಯಿಂದಾಗಿ ಪ್ರಮುಖ ರೈಲ್ವೆ ಯೋಜನೆಗಳು ಹಿನ್ನಡೆಯಾಗುತ್ತಿವೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ಇದೇ ವೇಳೆ ಮಂಡ್ಯ ಜಿಲ್ಲೆಯ ರೈಲ್ವೆ ಅಭಿವೃದ್ಧಿಗೆ ಸಂಬಂಧಿಸಿದಂತೆ ಸೋಮಣ್ಣ ಹಲವು ಪ್ರಮುಖ ಅಂಶಗಳನ್ನು ಹಂಚಿಕೊಂಡರು: ಮಂಡ್ಯ ರೈಲ್ವೆ ನಿಲ್ದಾಣದ ಸಮಗ್ರ ಅಭಿವೃದ್ಧಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು 25 ಕೋಟಿ ರೂ. ಅನುದಾನ ನೀಡಿದ್ದಾರೆ.
ಸಾಮಾನ್ಯ ಜನರಿಗೆ ತೊಂದರೆಯಾಗದಂತೆ ರೈಲ್ವೆ ನಿಲ್ದಾಣದ ಕಾಮಗಾರಿಗಳನ್ನು ಶೀಘ್ರವಾಗಿ ಪರಿಶೀಲಿಸಲಾಗುವುದು. ರೈಲ್ವೆ ನಿಲ್ದಾಣದಿಂದ ಮಂಡ್ಯ ನಗರದ ವಿವಿಧ ಭಾಗಗಳಿಗೆ ಸುಗಮವಾಗಿ ಸಂಚರಿಸಲು ಬಸ್‌ಗಳ ವ್ಯವಸ್ಥೆ ಮಾಡಲಾಗುವುದು. ಮಂಡ್ಯ ಭಾಗದ ಜನರ ಪ್ರಮುಖ ಬೇಡಿಕೆಯಾದ ಮೆಮು (MEMU) ರೈಲು ಒದಗಿಸುವ ಬಗ್ಗೆ ಹೆಚ್ಚಿನ ಗಮನ ಹರಿಸಲಾಗುವುದು.
ಮೈಸೂರು-ಬೆಂಗಳೂರು ರೈಲ್ವೆ ಮಾರ್ಗದಲ್ಲಿ ಪ್ರಯಾಣಿಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ತಮಗೆ ಮಾಹಿತಿ ಇದೆ ಎಂದು ಸಚಿವರು ತಿಳಿಸಿದರು. ಈ ಕುರಿತು ಶೀಘ್ರದಲ್ಲೇ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.
ಇನ್ನೂ ಈ ವಿಚಾರವಾಗಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆಯೂ ಪ್ರಸ್ತಾಪಿಸಿದ ಸೋಮಣ್ಣ, ನಾನು ಮತ್ತು ಕುಮಾರಸ್ವಾಮಿ ಅವರು ಈ ಭಾಗದ ಅಭಿವೃದ್ಧಿಯ ಬಗ್ಗೆ ಚರ್ಚಿಸಿದ್ದೇವೆ. ನಾವೆಲ್ಲರೂ ಸೇರಿ ರೈಲ್ವೆ ಸಮಸ್ಯೆಗಳನ್ನು ಹಂತ ಹಂತವಾಗಿ ಸರಿಪಡಿಸುತ್ತೇವೆ ಎಂದರು.



