Saturday, April 19, 2025
Google search engine

Homeರಾಜಕೀಯಬ್ರದರ್ರೋ ಎಂದು ಕೆಣಕಿದ ಸಿದ್ದರಾಮಯ್ಯಗೆ ಟಿಕ್ ಟಿಕ್ ಸಿದ್ದರಾಮಯ್ಯ ಎಂದು ಛೇಡಿಸಿದ ಹೆಚ್.ಡಿ.ಕುಮಾರಸ್ವಾಮಿ

ಬ್ರದರ್ರೋ ಎಂದು ಕೆಣಕಿದ ಸಿದ್ದರಾಮಯ್ಯಗೆ ಟಿಕ್ ಟಿಕ್ ಸಿದ್ದರಾಮಯ್ಯ ಎಂದು ಛೇಡಿಸಿದ ಹೆಚ್.ಡಿ.ಕುಮಾರಸ್ವಾಮಿ

ಮಂತ್ರಿಗಳ ಮಾನಗೇಡಿ ಕೃತ್ಯ ಸಮರ್ಥನೆಗೆ ಕಿಡಿ

ಬೆಂಗಳೂರು: ಅಧಿಕಾರಿಗಳಿಂದ ವಸೂಲಿ ಆರೋಪ ಎದುರಿಸುತ್ತಿರುವ ಕೃಷಿ ಸಚಿವ ಚೆಲುವರಾಯಸ್ವಾಮಿ ಅವರ ವಿರುದ್ಧ ರಾಜ್ಯಪಾಲರಿಗೆ 7 ಅಧಿಕಾರಿಗಳು ಬರೆದಿರುವ ದೂರಿನ ಪತ್ರದ ಸೃಷ್ಟಿಕರ್ತರು “ನಿಮ್ಮ ಬ್ರದರ್ರೋ”? ಎಂದು ಕೆಣಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಅವರನ್ನು ಟಿಕ್ ಟಿಕ್ ಸಿದ್ದರಾಮಯ್ಯ ಎಂದು ಕಾಲೆಳೆದಿದ್ದಾರೆ. ಅಲ್ಲದೆ, #YstTax #CashForPosting ಹ್ಯಾಷ್ ಟ್ಯಾಗ್ ಹಾಕಿ ಟಾಂಗ್ ನೀಡಿದ್ದಾರೆ.

ಮಂತ್ರಿಗಳ ಮಾನಗೇಡಿ ಕೃತ್ಯಗಳನ್ನೂ ಸಮರ್ಥನೆ ಮಾಡಿಕೊಳ್ಳುವ ಲಜ್ಜೆಗೇಡಿ ಮುಖ್ಯಮಂತ್ರಿ ಈ ರಾಜ್ಯಕ್ಕೆ ವಕ್ಕರಿಸಿದ್ದಾರೆ!! ಸಚಿವರ ಸುಲಿಗೆಯನ್ನೇ ಸಿಗ್ಗಿಲ್ಲದೆ ಸಮರ್ಥನೆ ಮಾಡಿಕೊಳ್ಳುವ ‘ಸಿದ್ದಕಲೆ’ ಅಸಹ್ಯ ಮತ್ತು ವಾಕರಿಕೆ ತರಿಸುತ್ತಿದೆ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಕಲಿ ಪತ್ರ ಎಂದಾದರೆ ರಾಜ್ಯಪಾಲರ ಕಾರ್ಯಾಲಯ ನಕಲಿ (!?) ಪತ್ರದ ಮೇರೆಗೆ ಕ್ರಮ ಜರುಗಿಸಿ ಎಂದು ಷರಾ ಬರೆದಿದೆಯೇ? ಸುಳ್ಳಿನ ಪತ್ರಕ್ಕೆ ಮಾನ್ಯ ರಾಜ್ಯಪಾಲರು ಸ್ಪಂದಿಸಿದ್ದಾರೆಯೇ? ರಾಜಧರ್ಮದ ಪ್ರವಚನಕಾರರೇ ರಾಜಭವನದ ಪಾವಿತ್ರ್ಯವನ್ನೇ ಶಂಕಿಸುವುದು ತರವೇ? ಸ್ವಯಂ ಘೋಷಿತ ನಕಲಿ ಸಂವಿಧಾನ ತಜ್ಞನಿಗೆ ಇದು ಭೂಷಣವಲ್ಲ ಎಂದು ಹಾಲಿ ಮುಖ್ಯಮಂತ್ರಿಗೆ ಮಾಜಿ ಮುಖ್ಯಮಂತ್ರಿ ಅವರು ಚಾಟಿ ಬೀಸಿದ್ದಾರೆ.

ಕಂಡೋರ ಭುಜದ ಮೇಲೆ ಬಂದೂಕಿಟ್ಟು ಇನ್ನೊಬ್ಬರ ರಾಜಕೀಯ ಜೀವನ ಎತ್ತಿಬಿಡುವ ನಿಮ್ಮಂಥ ‘ಎತ್ತುವಳಿ ಗಿರಾಕಿ’ಗೆ ನಕಲಿಪತ್ರಗಳ ಸೃಷ್ಟಿ ಬೆಣ್ಣೆ ಕಡಿದಷ್ಟೇ ಸಲೀಸು. ಮತ್ತೊಬ್ಬರ ಶ್ರಮದ ಬೆವರೇ ನಿಮ್ಮ ಸ್ವಾರ್ಥ ರಾಜಕಾರಣಕ್ಕೆ ಹವಿಸ್ಸು ಎಂದು ಹೇಳಿರುವ ಕುಮಾರಸ್ವಾಮಿ ಅವರು; ನಿಮ್ಮ ಸಚಿವರ ವಿರುದ್ಧ ನಿಮ್ಮ ಕಾಂಗ್ರೆಸ್ ಶಾಸಕರೇ ಬರೆದ ಪತ್ರವನ್ನೇ ನಕಲಿ ಎಂದು ಬಿಂಬಿಸಿದ ‘ನಕಲಿರಾಮ’ನ ಉಪ್ಪುಹುಳಿ ಖಾರದ ಬಗ್ಗೆ ನನಗೆ ಗೊತ್ತಿಲ್ಲದ್ದೇನಲ್ಲ. ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರು ಉಗಿದು ಉಪ್ಪಾಕಿದ ಮೇಲೆ ಆ ನಕಲಿ ಪತ್ರ ‘ಅಸಲಿ’ಯಾದ ಕಥೆಯ ಹಕೀಕತ್ತು ಏನಿರಬಹುದು ಸಿಎಂ ಸಾಹೇಬರೇ? ಎಂದು ಪ್ರಶ್ನಿಸಿದ್ದಾರೆ.

ನಿಮ್ಮ ರಾಜಕೀಯ ಬದುಕಿಗೆ ಬ್ಲ್ಯಾಕ್’ಮೇಲೇ ಬಂಡವಾಳ. ಗೃಹ ಸಚಿವರು, ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ‘ಅಪ್ಪಯ್ಯ ಮತ್ತು ಅತೀಂದ್ರನ ಆಟಾಟೋಪ’ ಕಂಡು ಹೌಹಾರಿದವರು ಯಾರು? ವರ್ಗಾವಣೆ ಪಟ್ಟಿಗೆ ಅಲ್ಲಿ ಬಿದ್ದ ಟಿಕ್ಕುಗಳ ಲೆಕ್ಕ ಹೇಳಬೇಕಾ ಟಿಕ್ ಟಿಕ್ ಸಿದ್ದರಾಮಯ್ಯ?  ಎಂದು ಎಚ್ಚರಿಕೆ ನೀಡಿದ್ದಾರೆ.

RELATED ARTICLES
- Advertisment -
Google search engine

Most Popular