ಮೈಸೂರು : ಮೈಸೂರು ನಗರದ ಮೇಟಗಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತೃತೀಯ ಲಿಂಗಿಯೊಬ್ಬರಿಗೆ ಅಪಹರಣ ಯತ್ನ ಹಾಗೂ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದೆ.
ನಿನ್ನೆ ರಾತ್ರಿ ಸುಮಾರು 10.30ರ ವೇಳೆ, ಕುಂಬಾರಕೊಪ್ಪಲು ಸ್ಮಶಾನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸೀತಾ (23) ಅವರನ್ನು ಆರೋಪಿಗಳು ಬಲವಂತವಾಗಿ ಎತ್ತೊಯ್ಯಲು ಯತ್ನಿಸಿ, ಲೈಂಗಿಕ ದೌರ್ಜನ್ಯಕ್ಕೆ ಮುಂದಾದರೆಂದು ದೂರು ನೀಡಲಾಗಿದೆ.
ಪವನ್, ಸುಶೀಲ್, ಹರ್ಷ ಮತ್ತು ಮುರುಳಿ ಎಂಬ ನಾಲ್ವರು ಯುವಕರ ವಿರುದ್ಧ ಸೀತಾ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಕ್ಷಣವೇ ಕಾರ್ಯಾಚರಣೆ ನಡೆಸಿ, 24 ಗಂಟೆಯೊಳಗೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿ ತಲೆಮರೆಸಿಕೊಂಡಿದ್ದು, ಅವನ ಬಂಧನಕ್ಕಾಗಿ ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ.
ತೃತೀಯ ಲಿಂಗಿಯ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೀತಾ ಒತ್ತಾಯಿಸಿದ್ದಾರೆ.



