ಮಂಡ್ಯ : 2026ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಮಂಡ್ಯ ಜಿಲ್ಲಾ ಖಜಾನೆ ಉಪನಿರ್ದೇಶಕಿ ವರಲಕ್ಷ್ಮಿ ಅವರು ಆಯ್ಕೆಯಾಗಿದ್ದು ಪ್ರಶಸ್ತಿ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕುಮಾರ್ ಅವರು ಆಹ್ವಾನ ನೀಡಿದರು.
ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಆಯ್ಕೆ ಸಮಿತಿಯು ಕಾರ್ಯವೈಖರಿ, ಕಾರ್ಯಕ್ಷಮತೆ ಹಾಗೂ ಗಮನಾರ್ಹ ಸಾಧನೆಯನ್ನು ಪರಿಗಣಿಸಿ, ಜಿಲ್ಲಾ ಖಜಾನೆ ಉಪನಿರ್ದೇಶಕಿ ವರಲಕ್ಷ್ಮಿ ಅವರನ್ನು 2026ನೇ ಸಾಲಿನ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಏಪ್ರಿಲ್ 30 ರಂದು ಮಧ್ಯಾಹ್ನ 3.00 ಗಂಟೆಗೆ ಮಂಡ್ಯದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಿದ್ದು, ಪ್ರಶಸ್ತಿ ಪ್ರಧಾನ ಸಮಾರಂಭಕ್ಕೆ ಹಾಜರಾಗಿ, ಪ್ರಶಸ್ತಿಯನ್ನು ಸ್ವೀಕರಿಸುವಂತೆ ವರಲಕ್ಷ್ಮಿ ಅವರಿಗೆ ಮಂಡ್ಯ ಡಿಸಿ ಡಾ.ಕುಮಾರ್ ಅಹ್ವಾನ ನೀಡಿದರು.
ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ನೌಕರರ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ಹಾಗೂ ಉತ್ತಮ ಸೇವೆ ನೀಡುವಲ್ಲಿ ಉತ್ತೇಜನ ನೀಡುವ ದೃಷ್ಟಿಯಿಂದ ಪ್ರತೀ ವರ್ಷ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ನೀಡಲಾಗುತ್ತದೆ. ಕಾರ್ಯವೈಖರಿಯಲ್ಲಿ ಸುಧಾರಣೆಯನ್ನು ತರುವ ಮೂಲಕ ಸಾರ್ವಜನಿಕರಿಗೆ ಗುಣಮಟ್ಟದ ಸೇವೆಯನ್ನು ನೀಡುವ ಉದ್ದೇಶದಿಂದ ಮತ್ತು ವಿಭಿನ್ನ ಮತ್ತು ಗಮನಾರ್ಹ ಸಾಧನೆಯನ್ನು ಅವಲೋಕಿಸಿ ಇನ್ನೂ ಹೆಚ್ಚಿನ ಉತ್ತಮ ಸೇವೆಯನ್ನು ನೀಡುವ ಉದ್ದೇಶದಿಂದ ಅಧಿಕಾರಿ ಮತ್ತು ನೌಕರರಿಗೆ ಉತ್ತೇಜನ ನೀಡುವ ಸಲುವಾಗಿ ಈ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ನೀಡಲಾಗುತ್ತದೆ ಎಂದು ಡಿಸಿ ಡಾ.ಕುಮಾರ ತಿಳಿಸಿದ್ದಾರೆ.



