ಬೆಂಗಳೂರು : ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗುವ ಕುರಿತು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದ್ದು, ಈ ವಿಷಯವಾಗಿ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆದಿದ್ದು, ಮುಂದಿನ 3 ರಿಂದ 4 ದಿನಗಳಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರುದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, SIR ಪ್ರಕ್ರಿಯೆಗೆ ಸಂಬಂಧಿಸಿದಂತೆ ಸರ್ಕಾರ ಎಲ್ಲಾ ಕಾನೂನು ಆಯ್ಕೆಗಳನ್ನು ಪರಿಶೀಲಿಸಿದೆ ಎಂದರಲ್ಲದೆ, ಪ್ರಸ್ತುತ ನಡೆಯುತ್ತಿರುವ ಪರಿಷ್ಕರಣೆ ಪ್ರಕ್ರಿಯೆಯ ಮಧ್ಯದಲ್ಲೇ ಸುಪ್ರೀಂ ಕೋರ್ಟ್‌ಗೆ ಹೋಗಬೇಕೇ ಅಥವಾ ಅಂತಿಮ ಮತದಾರರ ಪಟ್ಟಿ ಪ್ರಕಟವಾದ ಬಳಿಕ ನ್ಯಾಯಾಲಯದ ಮೊರೆ ಹೋಗಬೇಕೇ ಎಂಬ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಿದರು.
ಇನ್ನು ಸರ್ಕಾರದ ಪ್ರಮುಖ ಉದ್ದೇಶ ಮತದಾರರ ಹಕ್ಕುಗಳನ್ನು ರಕ್ಷಿಸುವುದಾಗಿದ್ದು, ಯಾವುದೇ ಮತದಾರರ ಮತದಾನ ಹಕ್ಕನ್ನು ಕಸಿದುಕೊಳ್ಳುವ ಅಥವಾ ಕಡಿತಗೊಳಿಸುವ ಪ್ರಯತ್ನ ನಡೆದರೆ, ಅದನ್ನು ತಡೆಯುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಪಾಟೀಲ್ ಸ್ಪಷ್ಟಪಡಿಸಿದರು.
SIR ಪ್ರಕ್ರಿಯೆಯ ಪಾರದರ್ಶಕತೆ ಕುರಿತೂ ಸರ್ಕಾರ ಅನುಮಾನ ವ್ಯಕ್ತಪಡಿಸಿದ್ದು, ಇತರ ರಾಜ್ಯಗಳಲ್ಲಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಿರುವ ಘಟನೆಗಳನ್ನು ಉಲ್ಲೇಖಿಸಿದ ಅವರು, ಇಂತಹ ಕ್ರಮಗಳು ಚುನಾವಣಾ ವ್ಯವಸ್ಥೆಯ ಮೇಲಿನ ಸಾರ್ವಜನಿಕ ನಂಬಿಕೆಗೆ ಧಕ್ಕೆ ತರುತ್ತವೆ ಎಂದು ಆತಂಕ ವ್ಯಕ್ತಪಡಿಸಿದರು.
ಚುನಾವಣಾ ಆಯೋಗದ ಬಳಿ ಹೋಗುವ ಬದಲು ನೇರವಾಗಿ ಸುಪ್ರೀಂ ಕೋರ್ಟ್‌ಗೆ ತೆರಳುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಮಗಿರುವ ದಾರಿ ಸುಪ್ರೀಂ ಕೋರ್ಟ್ ಎಂದು ಹೇಳಿದರು.
SIR ಪ್ರಕ್ರಿಯೆಗೆ ಸಂಬಂಧಿಸಿದಂತೆ ಸರ್ಕಾರ 10 ರಿಂದ 12 ಪ್ರಮುಖ ಆಕ್ಷೇಪಣೆಗಳನ್ನು ಗುರುತಿಸಿದೆ ಎಂದು ತಿಳಿಸಿದ ಪಾಟೀಲ್, ಅವುಗಳ ವಿವರಗಳನ್ನು ಬಹಿರಂಗಪಡಿಸಲು ನಿರಾಕರಿಸಿದ್ದು, ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಿರಿಯ ನಾಯಕರೊಂದಿಗೆ ಭಾನುವಾರ ಮತ್ತೊಂದು ಸುತ್ತಿನ ಚರ್ಚೆ ನಡೆಯಲಿದ್ದು, ಮೇ 25ರೊಳಗೆ ಸರ್ಕಾರ ಅಂತಿಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.



