ಕಾರವಾರ: ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ತೆರಳಿ ದುರ್ಮರಣಕ್ಕೀಡಾದ 8 ಮಂದಿಯ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವುದು ಅತ್ಯಂತ ದುಃಖಕರ ಘಟನೆ ಎಂದು ತಿಳಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿರುವ ಸಿಎಂ, ಮಾನವೀಯ ನೆಲೆಯಲ್ಲಿ ಸರ್ಕಾರದಿಂದ ನೆರವು ನೀಡಲಾಗುವುದು ಎಂದಿದ್ದಾರೆ.
ಇನ್ನೂ ಕೆಲವರು ಕಾಣೆಯಾಗಿರುವ ಮಾಹಿತಿ ಲಭ್ಯವಾಗಿದ್ದು, ಅವರಿಗಾಗಿ ತೀವ್ರ ಶೋಧ ಕಾರ್ಯ ಮುಂದುವರಿದಿದೆ. ಕಾಣೆಯಾದವರು ಸುರಕ್ಷಿತವಾಗಿ ಮರಳಲಿ ಎಂದು ಪ್ರಾರ್ಥಿಸೋಣ ಎಂದು ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದಾರೆ. ಜೊತೆಗೆ ಸಚಿವ ಮಂಕಾಳು ವೈದ್ಯರನ್ನು ಘಟನಾ ಸ್ಥಳಕ್ಕೆ ತೆರಳುವಂತೆ ಸೂಚಿಸಿರುವುದಾಗಿ ಮಾಹಿತಿ ನೀಡಿದ್ದಾರೆ.



