ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಮತ್ತು ಸಚಿವ ಸಂಪುಟ ಪುನಾರಚನೆ ಕುರಿತ ಚರ್ಚೆಗಳು ತೀವ್ರವಾಗಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್ ಕರೆಯ ಮೇರೆಗೆ ದೆಹಲಿಗೆ ತೆರಳಲು ಸಿದ್ಧರಾಗಿದ್ದಾರೆ. ಈ ಬೆಳವಣಿಗೆಯ ನಡುವೆ ಸಚಿವರ ಖಾತೆಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಿ ರಾಜಭವನ ಅಧಿಕೃತ ಅಧಿಸೂಚನೆ ಪ್ರಕಟಿಸಿದೆ.
ಅನಾರೋಗ್ಯದಿಂದ ನಿಧನರಾದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ ಅವರ ಇಲಾಖೆಯ ಜವಾಬ್ದಾರಿಯನ್ನು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ಅವರಿಗೆ ನೀಡಲಾಗಿದೆ. ಮತ್ತೊಂದೆಡೆ, ರಾಜೀನಾಮೆಯಿಂದ ತೆರವಾಗಿದ್ದ ಸಹಕಾರ, ಯುವಜನ ಕ್ರೀಡೆ ಹಾಗೂ ಪರಿಶಿಷ್ಟ ಪಂಗಡ ಕಲ್ಯಾಣ ಖಾತೆಗಳನ್ನು ಸಿಎಂ ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ. ಹಣಕಾಸು, ವಾರ್ತಾ, ಸಂಸದೀಯ ವ್ಯವಹಾರಗಳು ಸೇರಿದಂತೆ ಹಲವು ಪ್ರಮುಖ ಇಲಾಖೆಗಳ ಹೊಣೆಗಾರಿಕೆಯೂ ಮುಖ್ಯಮಂತ್ರಿ ಅವರಲ್ಲೇ ಮುಂದುವರಿಯಲಿದೆ.



