ಬೆಂಗಳೂರು : ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯನ್ನು ಕಾಂಗ್ರೆಸ್ ರಾಜಕೀಯ ವಿಷಯವನ್ನಾಗಿ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದ್ದು, ಇಂಧನ ಮೇಲಿನ ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಕಡಿಮೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ವಿಧಿಸಿರುವ ಹೆಚ್ಚಿನ ವ್ಯಾಟ್‌ನಿಂದ ಕರ್ನಾಟಕದಲ್ಲಿ ಇಂಧನ ದರಗಳು ದೆಹಲಿ ಸೇರಿದಂತೆ ಹಲವು ರಾಜ್ಯಗಳಿಗಿಂತ ಹೆಚ್ಚಾಗಿವೆ ಎಂದು ಆರೋಪಿಸಿದರಲ್ಲದೆ, ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಹೆಚ್ಚುವರಿ ಆದಾಯ ಗಳಿಸುತ್ತಿದ್ದು, ವ್ಯಾಟ್ ಕಡಿಮೆ ಮಾಡುವ ಬದಲು ಕೇಂದ್ರ ಸರ್ಕಾರದ ಮೇಲೆ ಹೊಣೆ ಹಾಕುತ್ತಿದೆ ಎಂದು ಟೀಕಿಸಿದರು.
ಇಂಧನ ದರ ಏರಿಕೆಯಿಂದ ರಾಜ್ಯ ಸರ್ಕಾರಕ್ಕೆ ವರ್ಷಕ್ಕೆ ಸುಮಾರು ₹6,000 ಕೋಟಿ ಹೆಚ್ಚುವರಿ ಆದಾಯ ಬರುತ್ತಿದ್ದು, ಅದನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲಾಗುತ್ತಿದೆ. ಜನರಿಗೆ ನಿಜವಾಗಿಯೂ ನೆರವಾಗಬೇಕೆಂದಿದ್ದರೆ ಸರ್ಕಾರ ತನ್ನ ತೆರಿಗೆ ಕಡಿಮೆ ಮಾಡಬೇಕು. ಇಲ್ಲವಾದರೆ, ಇಂಧನ ದರ ಏರಿಕೆಯಿಂದ ಗಳಿಸುತ್ತಿರುವ ಹೆಚ್ಚುವರಿ ಆದಾಯವನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು. ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ಜನರನ್ನು ದಾರಿ ತಪ್ಪಿಸುವ ಪ್ರಯತ್ನವಾಗಿದೆ ಎಂದು ಆರೋಪಿಸಿದರು.
ಇದೇ ವೇಳೆ ಕಾಂಗ್ರೆಸ್‌ನೊಳಗಿನ ಮುಖ್ಯಮಂತ್ರಿ ಸ್ಥಾನ ಕುರಿತ ಒಳಜಗಳದ ಬಗ್ಗೆ ಪ್ರತಿಕ್ರಿಯಿಸಿದ ಅಶೋಕ್, ಪಕ್ಷದೊಳಗೆ ಅಧಿಕಾರಕ್ಕಾಗಿ ಪೈಪೋಟಿ ನಡೆಯುತ್ತಿದೆ ಎಂದು ಹೇಳಿದರು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ರಾಜಕೀಯ ಭವಿಷ್ಯ ಭದ್ರಪಡಿಸಿಕೊಳ್ಳಲು ಯತ್ನಿಸುತ್ತಿದ್ದಾರೆಯೇ ಅಥವಾ ಬೇರೆ ರಾಜಕೀಯ ನಿರ್ಧಾರ ಕೈಗೊಳ್ಳಲಿದೆಯೇ ಎಂಬುದು ಸ್ಪಷ್ಟವಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಚಿವರೊಂದಿಗೆ ದೆಹಲಿಗೆ ತೆರಳುತ್ತಿರುವುದರಿಂದ ಸಿಎಂ ಹುದ್ದೆ ಕುರಿತ ಚರ್ಚೆಗಳು ಹೆಚ್ಚಾಗಿವೆ ಎಂದು ಹೇಳಿದರು.
ಭಟ್ಕಳದಲ್ಲಿ ಹಿಂದೂಗಳು ನಿರ್ಮಿಸಿದ್ದ ವೇದಿಕೆ ಧ್ವಂಸಗೊಳಿಸಿರುವ ಘಟನೆ ಕುರಿತು ಮಾತನಾಡಿದ ಅವರು, ಕೆಲವು ಮತಾಂಧರ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ಕಲಬುರಗಿ ಜಿಲ್ಲೆಯ ಆಳಂದದಲ್ಲಿ ಕೋಮು ಹಿಂಸಾಚಾರ ಪ್ರಕರಣಗಳನ್ನು ಹಿಂಪಡೆಯುವ ಸರ್ಕಾರದ ನಿರ್ಧಾರದ ಬಳಿಕ ಇಂತಹ ಘಟನೆಗಳು ಹೆಚ್ಚಾಗುತ್ತಿವೆ ಎಂದು ಟೀಕಿಸಿದರು.
ಪೊಲೀಸರ ಮೇಲೆ ದಾಳಿ ಮಾಡಿದವರ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಇದೇ ವೇಳೆ, ಕಾಕ್ರೋಚ್ ಜನತಾ ಪಾರ್ಟಿ ಹೆಸರಿನಲ್ಲಿ ದೇಶವಿರೋಧಿ ಶಕ್ತಿಗಳು ದೇಶವನ್ನು ವಿಭಜಿಸಲು ಯತ್ನಿಸುತ್ತಿವೆ ಎಂದು ಆರೋಪಿಸಿದ ಅವರು, ಜನರು ಇಂತಹ ಟೂಲ್‌ಕಿಟ್‌ಗಳಿಗೆ ಮರುಳಾಗಬಾರದು ಎಂದು ಹೇಳಿದರು.



