ಮಂಡ್ಯ: ತಮಿಳುನಾಡಿನಲ್ಲಿ ವಿಜಯ್ ಅವರಂತಹ ನೂರು ಮಂದಿ ಮುಖ್ಯಮಂತ್ರಿಗಳಾದರೂ ಮೇಕೆದಾಟು ಅಣೆಕಟ್ಟು ನಿರ್ಮಾಣವನ್ನು ತಡೆಯಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಡಿಪಿಆರ್ (ವಿಸ್ತೃತ ಯೋಜನಾ ವರದಿ) ಸಿದ್ಧಪಡಿಸಲಾಗಿದ್ದು, ಕಾವೇರಿ ವಿಚಾರವನ್ನು ಕಾವೇರಿ ನೀರು ನಿರ್ವಹಣಾ ಮಂಡಳಿಯಲ್ಲಿ ಚರ್ಚಿಸಿ ತೀರ್ಮಾನಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ ಎಂದು ಹೇಳಿದರು.
ಸುಪ್ರೀಂ ಕೋರ್ಟ್‌ನ ಆದೇಶದ ಅನುಸಾರ ಸರ್ಕಾರ ಅಗತ್ಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ್ದು, ಮೇಕೆದಾಟು ಯೋಜನೆ ಜಾರಿಗೆ ಸಿದ್ಧತೆ ನಡೆಸಲಾಗಿದೆ. ಈ ನಡುವೆ ಯೋಜನೆ ವಿರುದ್ಧ ಕಾನೂನು ಹೋರಾಟ ನಡೆಸುವುದಾಗಿ ನಟ ವಿಜಯ್ ಹೇಳಿರುವುದಕ್ಕೂ ಅವರು ಪ್ರತಿಕ್ರಿಯಿಸಿದರು.
ತಮಿಳುನಾಡಿಗೆ ಅವರ ಪಾಲಿನ ನೀರನ್ನು ಕರ್ನಾಟಕ ನೀಡುತ್ತಿದೆ. ಆದರೆ ಕರ್ನಾಟಕದ ಭೂಭಾಗದಲ್ಲಿ ಅಣೆಕಟ್ಟು ನಿರ್ಮಿಸುವುದನ್ನು ತಡೆಯುವ ಹಕ್ಕು ಅವರಿಗೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನೂ ಬಿಜೆಪಿ ಈ ವಿಚಾರವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ ಅವರು, ಗೋವಾದಲ್ಲೂ ಬಿಜೆಪಿ ಸರ್ಕಾರವೇ ಇದ್ದರೂ ಕಳಸಾ-ಬಂಡೂರಿ ಯೋಜನೆಗೆ ಅನುಮತಿ ಪಡೆಯಲು ಸಾಧ್ಯವಾಗಿಲ್ಲ ಎಂದು ಟೀಕಿಸಿದರು.
ಯಾರು ಏನೇ ಪ್ರಯತ್ನ ಮಾಡಿದರೂ ಮೇಕೆದಾಟು ಅಣೆಕಟ್ಟು ನಿರ್ಮಾಣವನ್ನು ತಡೆಯಲು ಸಾಧ್ಯವಿಲ್ಲ ಎಂದು ಗಣಿಗ ರವಿಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು.



