ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ನಾಯಕತ್ವ ಬದಲಾವಣೆಯ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿದ್ದು, ತೀವ್ರ ಕುತೂಹಲ ಮೂಡಿಸಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗುರುವಾರ (ಮೇ 28) ನಡೆಯಲಿರುವ ಮಹತ್ವದ ‘ಬ್ರೇಕ್ಫಾಸ್ಟ್ ಮೀಟಿಂಗ್’ (ಉಪಾಹಾರ ಕೂಟ) ನಲ್ಲಿ ತಮ್ಮ ರಾಜೀನಾಮೆಯನ್ನು ಘೋಷಿಸುವ ಸಾಧ್ಯತೆಯಿದೆ ಎಂಬ ವದಂತಿಗಳು ದಟ್ಟವಾಗಿವೆ.
ಈ ಹೈವೋಲ್ಟೇಜ್ ಮೀಟಿಂಗ್ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಭಾಗವಹಿಸಲಿದ್ದಾರೆ. ಪ್ರಸ್ತುತ ದೆಹಲಿಯಲ್ಲಿರುವ ಡಿ.ಕೆ. ಶಿವಕುಮಾರ್ ಅವರು ನಿಗದಿಗಿಂತ ಮುಂಚಿತವಾಗಿ ಅಂದರೆ ಗುರುವಾರ ಮುಂಜಾನೆ 5.45 ಕ್ಕೆ ದೆಹಲಿಯಿಂದ ಬೆಂಗಳೂರಿಗೆ ನಿರ್ಗಮಿಸಿದ್ದು, ಬೆಳಗ್ಗೆ 9 ಗಂಟೆಗೆ ನಡೆಯಲಿರುವ ಬ್ರೇಕ್ಫಾಸ್ಟ್ ಮೀಟಿಂಗ್ನಲ್ಲಿ ಪಾಲ್ಗೊಳ್ಳಲಿದ್ದಾರೆ.
ದೆಹಲಿಯಲ್ಲಿ ನಡೆದಿದ್ದ ಮ್ಯಾರಥಾನ್ ಸಭೆ
ಕರ್ನಾಟಕ ಸಿಎಂ ಕುರ್ಚಿ ಕುರಿತ ಸಸ್ಪೆನ್ಸ್ ನಡುವೆಯೇ, ಮಂಗಳವಾರ (ಮೇ 26) ದೆಹಲಿಯ ಇಂದಿರಾ ಭವನದಲ್ಲಿ ಹೈಕಮಾಂಡ್ ನಾಯಕರೊಂದಿಗೆ ಮ್ಯಾರಥಾನ್ ಸಭೆ ನಡೆದಿತ್ತು. ಈ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರೊಂದಿಗೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಭಾಗವಹಿಸಿದ್ದರು.
2.5 ವರ್ಷದ ಅಧಿಕಾರ ಹಂಚಿಕೆ ಸೂತ್ರ?
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೇ 20ಕ್ಕೆ ಮೂರು ವರ್ಷಗಳು ಪೂರ್ಣಗೊಂಡಿವೆ. ಅಂದಿನಿಂದಲೇ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಕುರಿತ ಸಸ್ಪೆನ್ಸ್ ಮುಂದುವರಿದಿದೆ.
2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದಾಗ, ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ತಲಾ ಎರಡೂವರೆ ವರ್ಷಗಳ ಅಧಿಕಾರ ಹಂಚಿಕೆಯ ‘ರಹಸ್ಯ ಒಪ್ಪಂದ’ ನಡೆದಿತ್ತು ಎನ್ನಲಾಗಿದೆ. ಅದರಂತೆ ಈಗ ಡಿ.ಕೆ. ಶಿವಕುಮಾರ್ ಅವರಿಗೆ ಸಿಎಂ ಪಟ್ಟ ನೀಡಬೇಕು ಎಂದು ಅವರ ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ.
ದೆಹಲಿ ಮೂಲಗಳ ಮಾಹಿತಿ ಏನು?
ಒಂದು ವೇಳೆ ಹೈಕಮಾಂಡ್ ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಸಲು ತೀರ್ಮಾನಿಸಿದರೆ, ಡಿ.ಕೆ. ಶಿವಕುಮಾರ್ ಅವರನ್ನು ಸಮಾಧಾನಪಡಿಸಲು ಅವರ ಸಹೋದರ ಡಿ.ಕೆ. ಸುರೇಶ್ ಅವರನ್ನು ರಾಜ್ಯಸಭೆಗೆ ಕಳುಹಿಸಲು ಪಕ್ಷ ಚಿಂತನೆ ನಡೆಸಿದೆ ಎಂದು ನಂಬಲರ್ಹ ಮೂಲಗಳು ತಿಳಿಸಿವೆ. ಹೀಗಾಗಿ ಇಂದಿನ ಬ್ರೇಕ್ಫಾಸ್ಟ್ ಮೀಟಿಂಗ್ ಇಡೀ ರಾಜ್ಯದ ಗಮನ ಸೆಳೆದಿದೆ.(ಏಜೆನ್ಸಿಸ್)



