ಬೆಂಗಳೂರು : ದೇವರು ವರವನ್ನೂ ಕೊಡಲ್ಲ, ಶಾಪವನ್ನೂ ಕೊಡಲ್ಲ ಅವಕಾಶ ಮಾತ್ರ ನೀಡುತ್ತಾನೆ. ಆ ಅವಕಾಶದಲ್ಲಿ ನಾವು ಏನು ಸಾಧಿಸುತ್ತೇವೆ ಎಂಬುದೇ ಮುಖ್ಯ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ಅವರು ಸಾಮಾಜಿಕ ಜಾಲತಾಣದಲ್ಲಿ ಭಾವುಕ ಸಂದೇಶ ಹಂಚಿಕೊಂಡಿದ್ದಾರೆ.
ಮೈಸೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಹುಟ್ಟಿ, ಹೋರಾಟದ ಮೂಲಕ ರಾಜಕೀಯಕ್ಕೆ ಬಂದ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಪರಿಪೂರ್ಣ ಪ್ರತೀಕವಾಗಿದ್ದಾರೆ ಎಂದಿದ್ದಾರೆ. ಅಲ್ಲದೆ ಅವರು ಬಡವರ ಬಂಧುವಾಗಿ ಹಾಗೂ ಜನಪರ ಯೋಜನೆಗಳ ಮೂಲಕ ರಾಜ್ಯದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸುಮಾರು ಐವತ್ತು ವರ್ಷಗಳ ರಾಜಕೀಯ ಅನುಭವ ಹೊಂದಿರುವ ಸಿದ್ದರಾಮಯ್ಯ ಅವರು ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಪ್ರಭಾವಶಾಲಿ ಹಾಗೂ ದೀರ್ಘಾವಧಿ ಮುಖ್ಯಮಂತ್ರಿಗಳಲ್ಲಿ ಒಬ್ಬರು ಎಂದು ಅವರು ಹೇಳಿದ್ದಾರೆ. ಅವರ ಸೇವೆ ಮತ್ತು ನಾಯಕತ್ವ ಜನಮಾನಸದಲ್ಲಿ ಸದಾ ಉಳಿಯಲಿದೆ.
2020ರಲ್ಲಿ ತಾವು ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷನಾಗಿ ಆಯ್ಕೆಯಾದಾಗಿನಿಂದ ಇಂದಿನವರೆಗೆ ಸಿದ್ದರಾಮಯ್ಯ ಅವರು ತಮ್ಮೊಂದಿಗೆ ಪಕ್ಷ ಸಂಘಟನೆಯಲ್ಲಿ ಜೊತೆಯಾಗಿದ್ದರು ಎಂದು ಡಿ.ಕೆ.ಶಿವಕುಮಾರ್ ಸ್ಮರಿಸಿದ್ದು, ಸಚಿವನಾಗಿ ಮತ್ತು ಉಪಮುಖ್ಯಮಂತ್ರಿಯಾಗಿ ಅವರಿಂದ ಪಡೆದ ಮಾರ್ಗದರ್ಶನ ತಮ್ಮ ಭಾಗ್ಯ ಎಂದು ಹೇಳಿದ್ದಾರೆ.
ಮುಂದಿನ ದಿನಗಳಲ್ಲಿಯೂ ರಾಜ್ಯದ ಹಿತದೃಷ್ಟಿಯಿಂದ ಹಾಗೂ ಪಕ್ಷದ ಬಲವರ್ಧನೆಗಾಗಿ ಸಿದ್ದರಾಮಯ್ಯ ಅವರ ಮಾರ್ಗದರ್ಶನ ಮುಂದುವರಿಯಲಿ ಎಂದು ಆಶಿಸಿದ್ದಾರೆ. ಕರ್ನಾಟಕದ ಅಭಿವೃದ್ಧಿಗಾಗಿ ಎಲ್ಲರೂ ಒಟ್ಟಾಗಿ ನಡೆಯೋಣ ಎಂದು ಅವರು ಕರೆ ನೀಡಿದ್ದಾರೆ.



