ನವದೆಹಲಿ: ಕೇರಳ ರಾಜ್ಯಕ್ಕೆ ಇನ್ನೊಂದು ವಾರದಲ್ಲಿ ಮುಂಗಾರು ಪ್ರವೇಶವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇದರ ಜೊತೆಗೆ ಮೇ 31 ರವರೆಗೆ ದೇಶದ 19 ರಾಜ್ಯಗಳಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯ ಸಾಧ್ಯತೆ ಇರುವುದಾಗಿ ಎಚ್ಚರಿಕೆ ನೀಡಲಾಗಿದೆ. ಮುಂದಿನ 2-3 ದಿನಗಳಲ್ಲಿ ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಕರಾವಳಿ ಪ್ರದೇಶಗಳಲ್ಲಿ ಮುಂಗಾರು ಮತ್ತಷ್ಟು ತೀವ್ರಗೊಳ್ಳುವ ನಿರೀಕ್ಷೆಯಿದೆ.
ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ರಾಜಸ್ಥಾನ, ಒಡಿಶಾ, ತಮಿಳುನಾಡು, ಪುದುಚೇರಿ, ಆಂಧ್ರ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಉತ್ತರಾಖಂಡ, ಹಿಮಾಚಲ ಪ್ರದೇಶ, ಮಧ್ಯಪ್ರದೇಶ, ಛತ್ತೀಸ್ಗಢ, ಗುಜರಾತ್ ಮತ್ತು ಗೋವಾ ಸೇರಿದಂತೆ ಹಲವು ರಾಜ್ಯಗಳಲ್ಲಿ ಶನಿವಾರ ಮತ್ತು ಭಾನುವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.
ಕೆಲವು ಪ್ರದೇಶಗಳಲ್ಲಿ ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿ.ಮೀ ವರೆಗೆ ತಲುಪಬಹುದು. ಬಿಹಾರ ಮತ್ತು ಜಾರ್ಖಂಡ್ನಲ್ಲಿ ಗಾಳಿಯ ವೇಗ 50 ರಿಂದ 60 ಕಿ.ಮೀ ವರೆಗೆ, ಕೆಲವೆಡೆ 70 ಕಿ.ಮೀ ವರೆಗೆ ಏರಬಹುದು ಎಂದು ಎಚ್ಚರಿಕೆ ನೀಡಲಾಗಿದೆ. ಮೇ 30 ರಂದು ಮಹಾರಾಷ್ಟ್ರದಲ್ಲಿ ಭಾರೀ ಮಳೆಯ ನಿರೀಕ್ಷೆಯಿದ್ದು, ಮೇ 31 ರಂದು ಕೊಂಕಣ ಮತ್ತು ಗೋವಾ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಗುಜರಾತ್ನಲ್ಲಿ ಜೂನ್ 2 ರವರೆಗೆ ಮಳೆ ಮುಂದುವರಿಯಲಿದೆ.
ಉತ್ತರ ಭಾರತದ ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಸಹ ಭಾರೀ ಮಳೆಯ ಮುನ್ಸೂಚನೆ ಇದೆ. ಉತ್ತರ ಪ್ರದೇಶದಲ್ಲಿ ಈಗಾಗಲೇ ಸಹರಾನ್ಪುರ ಸೇರಿದಂತೆ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.
ರಾಜಸ್ಥಾನದಲ್ಲಿ ತಾಪಮಾನ ಏರಿಕೆಯ ನಡುವೆಯೂ ಹಲವು ಕಡೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಕೇರಳದಲ್ಲಿ ಮುಂದಿನ 7 ದಿನಗಳ ಕಾಲ ಮುಂಗಾರು ಅಬ್ಬರ ಮುಂದುವರಿಯಲಿದ್ದು, ಚಂಡಮಾರುತದ ಸಾಧ್ಯತೆಯನ್ನೂ ಇಲಾಖೆ ಸೂಚಿಸಿದೆ. ಈ ವರ್ಷ ಜೂನ್ ರಿಂದ ಸೆಪ್ಟೆಂಬರ್ ಅವಧಿಯಲ್ಲಿ ಶೇಕಡಾ 90ರಷ್ಟು ಸಾಮಾನ್ಯ ಮಳೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.



