ಬೆಂಗಳೂರು: ರಾಜ್ಯಸಭೆ ಹಾಗೂ ವಿಧಾನ ಪರಿಷತ್ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಈ ಬಾರಿಯೂ ಅಚ್ಚರಿಯ ಹೆಸರುಗಳಿಗೆ ಮಣೆ ಹಾಕಿದೆ. ರಾಜ್ಯಸಭೆ ಅಭ್ಯರ್ಥಿಯಾಗಿ ಪಕ್ಷದ ರಾಜ್ಯ ಉಪಾಧ್ಯಕ್ಷ ಪ್ರೊ. ಎಂ. ನಾಗರಾಜ್ ಅವರನ್ನು ಘೋಷಿಸಲಾಗಿದೆ. ವಿಧಾನ ಪರಿಷತ್ ಚುನಾವಣೆಗೆ ಲಿಂಗರಾಜ್ ಪಾಟೀಲ್ ಹಾಗೂ ರಘು ಕೌಟಿಲ್ಯ ಅವರಿಗೆ ಟಿಕೆಟ್ ನೀಡಲಾಗಿದೆ.
ಗಮನಾರ್ಹವಾಗಿ, ಈ ಬಾರಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ರಾಜ್ಯಸಭೆ ಟಿಕೆಟ್ ನೀಡಲಾಗಿಲ್ಲ. ಮೈಸೂರಿನ ರಘು ಕೌಟಿಲ್ಯ ಪ್ರಸ್ತುತ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಗೋವಿಂದ ರಾಜು ಪರಿಷತ್ ಚುನಾವಣಾ ಕಣಕ್ಕಿಳಿಯಲಿದ್ದಾರೆ.
ಎಂ. ನಾಗರಾಜ್ ಅವರು ಪಕ್ಷ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ. ಬಿಜೆಪಿ ಕಾರ್ಯಾಲಯ ನಿರ್ಮಾಣ ಯೋಜನೆಯಲ್ಲಿ ಅವರು ಮಹತ್ವದ ಜವಾಬ್ದಾರಿ ನಿರ್ವಹಿಸಿದ್ದರು.



