ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತ ಚಲಾಯಿಸಿರುವುದಾಗಿ ಶಾಸಕ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ಮತದಾನ ಬಳಿಕ ಮಾತನಾಡಿದ ಅವರು, “ನಾನು ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಹಾಕಿದ್ದೇನೆ” ಎಂದು ಹೇಳಿದರು.
ಬಿಜೆಪಿ ಅಥವಾ ಜೆಡಿಎಸ್ ಪಕ್ಷದವರು ತಮ್ಮನ್ನು ಮತಕ್ಕಾಗಿ ಸಂಪರ್ಕಿಸಿಲ್ಲ ಎಂದು ತಿಳಿಸಿದ ಅವರು, ಮುಖ್ಯಮಂತ್ರಿ ಕರೆ ಮಾಡಿ ಬೆಂಬಲ ಕೋರಿದ್ದರು ಎಂದರು. “ನಮ್ಮ ಕ್ಷೇತ್ರದ ಸಮಸ್ಯೆಗಳನ್ನು ಪರಿಹರಿಸಿದರೆ ಬೆಂಬಲ ನೀಡುವುದಾಗಿ ಹೇಳಿದ್ದೆ. ಕ್ಷೇತ್ರದ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಈಗ ಎಲ್ಲವೂ ಮುಗಿದಿದ್ದು, ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದೇನೆ” ಎಂದು ಹೇಳಿದರು.
ಇದೇ ವೇಳೆ ಶಾಸಕ ಶಿವರಾಮ್ ಹೆಬ್ಬಾರ್ ಪ್ರತಿಕ್ರಿಯಿಸಿ, ಜೆಡಿಎಸ್ ಹಾಗೂ ಬಿಜೆಪಿಯಿಂದ ಯಾರೂ ತಮ್ಮ ಬಳಿ ಮತ ಕೇಳಿಲ್ಲ ಎಂದರು. ಕಾಂಗ್ರೆಸ್ ನಾಯಕರು ಹಾಗೂ ಮುಖ್ಯಮಂತ್ರಿ ಬೆಂಬಲ ಕೋರಿದ್ದರು ಎಂದು ತಿಳಿಸಿದರು. ಆದರೆ, “ನಾನು ಕಾಂಗ್ರೆಸ್ಗೆ ಮತ ಹಾಕಿದ್ದೇನೆ ಎಂದು ಎಲ್ಲೂ ಹೇಳಿಲ್ಲ. ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸಿದ್ದೇನೆ ಎಂದು ಮಾತ್ರ ಹೇಳಿದ್ದೇನೆ” ಎಂದು ಸ್ಪಷ್ಟಪಡಿಸಿದರು.



