ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿಯ ಪತಿ ಹಾಗೂ ಬೆಳಗಾವಿ ವಿಭಾಗದ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ.
ಬೇನಾಮಿ ಆಸ್ತಿ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪಗಳ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಅವರ ನಿವಾಸ ಸೇರಿದಂತೆ ರಾಜ್ಯದ ಆರು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.
ಬೆಂಗಳೂರು, ಬೆಳಗಾವಿ ಮತ್ತು ಮೈಸೂರು ಸೇರಿದಂತೆ ವಿವಿಧ ಕಡೆಗಳಲ್ಲಿ ಪರಿಶೀಲನೆ ಮುಂದುವರಿದಿದೆ.
ಲಂಚದ ಹಣವನ್ನು ಅಕ್ರಮವಾಗಿ ಹೂಡಿಕೆ ಮಾಡಿ, ಬೇನಾಮಿ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಸಂಪಾದಿಸಿರುವ ಆರೋಪಗಳು ಕೇಳಿಬಂದಿವೆ. ಮುಂಜಾನೆಯೇ ಎರಡು ಕಾರುಗಳಲ್ಲಿ ಬಂದ ಇಡಿ ಅಧಿಕಾರಿಗಳು ಪ್ರಮುಖ ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿರುವುದಾಗಿ ತಿಳಿದುಬಂದಿದೆ.



