ಬೆಂಗಳೂರು : ರಾಮನಗರದ ಕಲ್ಯಾಣ ಮಂಟಪಗಳಲ್ಲಿ ಜನರನ್ನು ಕೂರಿಸಿ ಎಸ್ಐಆರ್ (SIR) ಪ್ರಕ್ರಿಯೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಪಕ್ಕೆ ರಾಜ್ಯ ಸರ್ಕಾರ ಪ್ರತಿಕ್ರಿಯಿಸಿದ್ದು, ಈ ಕುರಿತು ಮಾತನಾಡಿದ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಇದು ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್ ನಡುವಿನ ವೈಯಕ್ತಿಕ ಹೋರಾಟವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮುಂದುವರೆದು, ಎಸ್ಐಆರ್ ಪ್ರಕ್ರಿಯೆಗೆ ನಿರ್ದಿಷ್ಟ ನಿಯಮಗಳು ಮತ್ತು ಮಾರ್ಗಸೂಚಿಗಳು ಇದ್ದು, ಅವುಗಳ ಪ್ರಕಾರವೇ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದ ಅವರು, ಮನೆಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ಬದಲು ಸಮುದಾಯ ಭವನಗಳು ಅಥವಾ ಚೌಲ್ಟ್ರಿಗಳಲ್ಲಿ ಪ್ರಕ್ರಿಯೆ ನಡೆಸಲಾಗುತ್ತಿದ್ದರೆ ಅದು ನಿಯಮಗಳ ಉಲ್ಲಂಘನೆ. ಅಂತಹ ಸಂದರ್ಭಗಳಲ್ಲಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ಹೇಳಿದ್ದಾರೆ.
ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕು ಅತ್ಯಂತ ಮುಖ್ಯವಾಗಿದ್ದು, ಅದನ್ನು ಕಸಿದುಕೊಳ್ಳುವ ಹಕ್ಕು ಯಾರಿಗೂ ಇಲ್ಲ ಎಂದು ಒತ್ತಿ ಹೇಳಿದ ಪ್ರಿಯಾಂಕ್ ಖರ್ಗೆ, ಎಲ್ಲಾ ಪ್ರಕ್ರಿಯೆಗಳು ಸಂವಿಧಾನಬದ್ಧವಾಗಿಯೇ ನಡೆಯಬೇಕು ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನೂ ಮುಖ್ಯಮಂತ್ರಿಗಳು ರಾಜ್ಯದ ಪ್ರತಿ ಬೂತ್ಗೆ ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಲು ಸಾಧ್ಯವಿಲ್ಲ ಎಂದು ಹೇಳಿದ ಅವರು, ಸ್ಥಳೀಯ ಮಟ್ಟದಲ್ಲಿ ಅಧಿಕಾರಿಗಳು ಪ್ರಕ್ರಿಯೆಯನ್ನು ವೇಗವಾಗಿ ಪೂರ್ಣಗೊಳಿಸುವ ಉದ್ದೇಶದಿಂದ ಈ ರೀತಿಯ ಕ್ರಮ ತೆಗೆದುಕೊಂಡಿರಬಹುದು ಎಂದು ಅಭಿಪ್ರಾಯಪಟ್ಟರು.
ಈ ಕುರಿತು ಚುನಾವಣಾ ಆಯೋಗ ಸೂಕ್ತವಾಗಿ ಪರಿಶೀಲನೆ ನಡೆಸಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರಲ್ಲದೆ, ಇದೇ ವೇಳೆ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕ್ ಖರ್ಗೆ, ಚುನಾವಣಾ ಆಯೋಗಕ್ಕೆ ತಾವು ಸಲ್ಲಿಸಿದ್ದ 12 ಪ್ರಶ್ನೆಗಳಿಗೆ ಇನ್ನೂ ಉತ್ತರ ಬಂದಿಲ್ಲ ಎಂದು ಹೇಳಿ, ಆ ವಿಷಯದಲ್ಲೂ ವಿಪಕ್ಷಗಳು ಸ್ಪಷ್ಟತೆ ಕೇಳಬೇಕು ಎಂದು ಸವಾಲು ಹಾಕಿದರು.



