ಬೆಂಗಳೂರು : ರಾಜ್ಯದ ಹಲವು ಭಾಗಗಳಲ್ಲಿ ತೀವ್ರಗೊಂಡಿರುವ ಬರ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಪತ್ರ ಬರೆದಿರುವ ಅವರು, ರೈತರು, ಕೃಷಿ ಕಾರ್ಮಿಕರು ಮತ್ತು ಗ್ರಾಮೀಣ ಜನತೆ ಗಂಭೀರ ಸಂಕಷ್ಟ ಎದುರಿಸುತ್ತಿದ್ದಾರೆ. ಬಿತ್ತನೆ ಚಟುವಟಿಕೆಗಳಲ್ಲಿ ವಿಳಂಬವಾಗಿದ್ದು, ಬೆಳೆಗಳು ಒಣಗುವ ಅಪಾಯ ಎದುರಾಗಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯಾದ್ಯಂತ ಜಲಾಶಯಗಳ ನೀರಿನ ಮಟ್ಟ ನಿರಂತರವಾಗಿ ಕುಸಿಯುತ್ತಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಳ್ಳುವ ಸಾಧ್ಯತೆ ಇದೆ ಎಂದು ಅಶೋಕ್ ಎಚ್ಚರಿಸಿದ್ದಾರೆ.
150ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಅನೇಕ ಪ್ರದೇಶಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆ ದಾಖಲಾಗಿದೆ. ಈಗಾಗಲೇ ಬಿತ್ತನೆ ಮಾಡಿದ ಬೆಳೆಗಳು ತೇವಾಂಶದ ಕೊರತೆಯಿಂದ ಒಣಗುತ್ತಿವೆ ಎಂದು ಅವರು ಹೇಳಿದ್ದಾರೆ. ಇದರಿಂದ ಕೃಷಿ ಉತ್ಪಾದನೆಗೆ ದೊಡ್ಡ ಹೊಡೆತ ಬೀಳುವ ಸಾಧ್ಯತೆ ಇದೆ ಎಂದಿದ್ದಾರೆ.
ಇನ್ನೂ ಕೃಷಿ ಕಾರ್ಮಿಕರು ಉದ್ಯೋಗದ ಕೊರತೆಯಿಂದ ನಗರಗಳು ಹಾಗೂ ನೆರೆಯ ರಾಜ್ಯಗಳಿಗೆ ವಲಸೆ ಹೋಗುತ್ತಿರುವುದೂ ಆತಂಕಕಾರಿ ಬೆಳವಣಿಗೆ ಎಂದು ತಿಳಿಸಿದ್ದಾರೆ. ಜೊತೆಗೆ, ಹಲವು ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರು ಸಮರ್ಪಕ ಪರಿಶೀಲನೆ ನಡೆಸಿಲ್ಲ ಎಂಬುದನ್ನು ಅವರು ಟೀಕಿಸಿದ್ದಾರೆ.
ರಾಜ್ಯ ಸರ್ಕಾರ ತುರ್ತು ಬರ ಪರಿಹಾರ ಯೋಜನೆ ಘೋಷಿಸಿ, ಪರ್ಯಾಯ ಬೆಳೆ, ಬೀಜ, ಮೇವು, ಕುಡಿಯುವ ನೀರು ಪೂರೈಕೆ ಹಾಗೂ ತುರ್ತು ಉದ್ಯೋಗ ಸೃಷ್ಟಿಗೆ ಸಮಗ್ರ ಕಾರ್ಯಯೋಜನೆ ರೂಪಿಸಬೇಕು ಎಂದು ಆರ್.ಅಶೋಕ್ ಆಗ್ರಹಿಸಿದ್ದಾರೆ.



