ಬಳ್ಳಾರಿ: ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜು ಅರಸು ಅವರ ಜನ್ಮದಿನವನ್ನು ಜಿಲ್ಲಾಡಳಿತದ ವತಿಯಿಂದ ಆ.20ರಂದು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಜುಬೇರ್ ತಿಳಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಡಿ. ದೇವರಾಜು ಅರಸು ಅವರ 108ನೇ
ಜನ್ಮದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಪೂರ್ವಾಪೇಕ್ಷಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಗಸ್ಟ್ 20 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಡಾ. ರಾಜ್‌ಕುಮಾರ್ ರಸ್ತೆಯಲ್ಲಿರುವ ಬಿಡಿಎಎ ಫುಟ್‌ಬಾಲ್ ಮೈದಾನದ ವೇದಿಕೆ ಸಭಾಂಗಣದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಎಲ್ಲಾ ಸಂಘದ ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಹಿಂದುಳಿದ ವರ್ಗಗಳ ಹರಿಕಾರ ಡಿ. ದೇವರಾಜು ಅರಸು ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು. ವಿದ್ಯಾರ್ಥಿ ಕೇಂದ್ರಗಳ ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಗುವುದು.
ಕಾರ್ಯಕ್ರಮದಲ್ಲಿ ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಮತ್ತು ಪದವಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಅಭ್ಯುದಯಕ್ಕೆ ಶ್ರಮಿಸಿದ ವಿಶೇಷ ಸಂಪನ್ಮೂಲ ವ್ಯಕ್ತಿಗಳಿಂದ ಡಾ. ದೇವರಾಜು ಅರಸ್ ಕುರಿತು ವಿಶೇಷ ಉಪನ್ಯಾಸ ಆಯೋಜಿಸಬೇಕು. ಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಆರ್.ಸುರೇಶಬಾಬು ಸೇರಿದಂತೆ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ನಾನಾ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.