Friday, July 10, 2026
Google search engine

Homeರಾಜಕೀಯಜಿಬಿಎ ಚುನಾವಣೆಗೆ ಸಿದ್ಧತೆ: ಸಿಎಂ ಡಿಕೆಶಿ

ಜಿಬಿಎ ಚುನಾವಣೆಗೆ ಸಿದ್ಧತೆ: ಸಿಎಂ ಡಿಕೆಶಿ

ವರದಿ : ಸ್ಟೀಫನ್ ಜೇಮ್ಸ್.

ಬೆಳಗಾವಿ: ಜಿಬಿಎ ಚುನಾವಣೆಗೆ ಸರ್ಕಾರ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಅಧಿಕಾರಿಗಳು ಸುಪ್ರೀಂ ಕೋರ್ಟ್‌ಗೆ ತೆರಳಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಪ್ರಕ್ರಿಯೆಯಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಶುಕ್ರವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಬಿಎ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು ಸುಪ್ರೀಂ ಕೋರ್ಟ್‌ಗೆ ಹೋಗಿದ್ದು, ಅವರು ಆಗಸ್ಟ್‌ವರೆಗೆ ಸಮಯ ಕೇಳಿದ್ದಾರೆ. ಅಧಿಕಾರಿಗಳ ಸಮಸ್ಯೆ ಇರುವುದರಿಂದ ಅವರನ್ನು ಅವರ ಪಾಡಿಗೆ ಬಿಟ್ಟಿದ್ದೇನೆ. ನಾವು ಈ ವಿಚಾರದಲ್ಲಿ ಎಂಟ್ರಿಯಾಗುವುದಿಲ್ಲ. ಆದರೆ ಚುನಾವಣೆ ನಡೆಸಲು ಸರ್ಕಾರ ಸಿದ್ಧವಾಗಿದೆ ಎಂದರು.
ಸಂಪುಟ ವಿಸ್ತರಣೆ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಯಾವುದೇ ಒತ್ತಡ ಇಲ್ಲ. ನಮ್ಮ ನಾಯಕರು ಇಂದು ಅಥವಾ ನಾಳೆ ಬರುತ್ತಾರೆ. ಅವರು ಕರೆದಾಗ ಹೋಗಿ ಚರ್ಚೆ ಮಾಡುತ್ತೇನೆ ಎಂದರು.

ಬೆಳಗಾವಿಯಲ್ಲಿ ಆರ್‌ಎಸ್‌ಎಸ್ ಸಭೆ ಆಯೋಜನೆ ಕುರಿತು ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಬಂದಿಲ್ಲ. ಪತ್ರಿಕೆಗಳಲ್ಲಿ ನೋಡಿದ್ದೇನೆ. ವರದಿ ಕೇಳಿದ್ದೇನೆ. ಕಾನೂನಿನಲ್ಲಿ ಅವಕಾಶ ಇದ್ದರೆ ಅನುಮತಿ ಸಿಗುತ್ತದೆ. ಇಲ್ಲದಿದ್ದರೆ ಸಿಗುವುದಿಲ್ಲ. ಎಲ್ಲರಿಗೂ ಒಂದೇ ಕಾನೂನು ಅನ್ವಯವಾಗುತ್ತದೆ ಎಂದರು.

ರಾಜ್ಯದಲ್ಲಿ ಮಳೆ ಕೊರತೆಯ ಹಿನ್ನೆಲೆಯಲ್ಲಿ ಮೋಡ ಬಿತ್ತನೆಗೆ ಶಾಸಕರಿಂದ ಬೇಡಿಕೆ ಬಂದಿದೆ. ಈ ಬಗ್ಗೆ ಕಾನೂನು ಹಾಗೂ ಹಣಕಾಸು ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಬೇಕಿದೆ. ಶಾಸಕರು ಒತ್ತಾಯಿಸಿದ್ದಾರೆ. ಎಲ್ಲ ಆಯಾಮಗಳನ್ನು ಪರಿಶೀಲಿಸಿ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.
ರಾಜ್ಯದ ಎಲ್ಲಾ ದೇವಸ್ಥಾನಗಳ ಹುಂಡಿಗಳ ಭದ್ರತೆ ಕುರಿತು ಎಚ್ಚರಿಕೆ ವಹಿಸುವಂತೆ ಮುಜರಾಯಿ ಇಲಾಖೆಗೆ ಸೂಚನೆ ನೀಡಿರುವುದಾಗಿ ಹೇಳಿದರು.

ಬೆಂಗಳೂರಿನಲ್ಲಿ ಬೀದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರ ಬೀದಿ ವ್ಯಾಪಾರಿಗಳಿಗೆ ಯಾವುದೇ ತೊಂದರೆ ನೀಡುವುದಿಲ್ಲ. ಆದರೆ ಮುಖ್ಯ ರಸ್ತೆಗಳಲ್ಲಿ ವ್ಯಾಪಾರಕ್ಕೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದರು.

ನಾನು ಬೆಂಗಳೂರು ಉಸ್ತುವಾರಿ ಸಚಿವರಾಗಿದ್ದಾಗ ಎಲ್ಲಾ ಶಾಸಕರನ್ನು ಕರೆದು ಬೀದಿ ವ್ಯಾಪಾರಿಗಳ ಸಮಸ್ಯೆ ಕುರಿತು ಸಭೆ ನಡೆಸಲಾಗಿತ್ತು. ಬಿಜೆಪಿ, ಜೆಡಿಎಸ್ ಸೇರಿದಂತೆ ಎಲ್ಲ ಪಕ್ಷಗಳ ಶಾಸಕರು ಭಾಗವಹಿಸಿದ್ದ ಆ ಸಭೆಯಲ್ಲಿ, ಸಂಚಾರ ದಟ್ಟಣೆ ತಪ್ಪಿಸಲು ಮುಖ್ಯ ರಸ್ತೆಗಳಿಂದ ವ್ಯಾಪಾರಿಗಳನ್ನು ಸ್ಥಳಾಂತರಿಸುವುದು ಅಗತ್ಯ ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು ಎಂದು ತಿಳಿಸಿದರು.

ರಾಜ್ಯದಲ್ಲಿ ಸುಮಾರು 60 ಸಾವಿರ ಬೀದಿ ವ್ಯಾಪಾರಿಗಳಿದ್ದು, ಅವರಲ್ಲಿ ಸುಮಾರು 30 ಸಾವಿರ ಮಂದಿ ಮಾತ್ರ ನೋಂದಣಿ ಮಾಡಿಕೊಂಡಿದ್ದಾರೆ. ಸರ್ಕಾರ ನಿಗದಿಪಡಿಸಿದ ಸ್ಥಳಗಳಲ್ಲಿ ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಲಾಗಿದ್ದು, ಅದೇ ಸ್ಥಳಗಳಲ್ಲಿ ಅಂಗಡಿ ನಡೆಸಬೇಕು ಎಂದು ಹೇಳಿದರು.

ಮುಖ್ಯ ರಸ್ತೆಗಳಲ್ಲಿ ಅಂಗಡಿ ಇಡಲು ಅವಕಾಶವಿಲ್ಲ ಎಂಬುದನ್ನು ಸುಪ್ರೀಂ ಕೋರ್ಟ್ ಕೂಡ ಸ್ಪಷ್ಟಪಡಿಸಿದೆ. ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಈ ಯೋಜನೆಯನ್ನು ಕಾರ್ಯರೂಪಕ್ಕೆ ತರುತ್ತಿದ್ದು, ಇದು ಅವರೊಬ್ಬರ ನಿರ್ಧಾರವಲ್ಲ. ಸರ್ಕಾರದ ನೀತಿಯಾಗಿದೆ ಎಂದರು.
ಈ ಸಂಬಂಧ ಇಂದು ಪೊಲೀಸರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುಂದಿನ ಕ್ರಮಗಳ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದರು. ಸರ್ಕಾರ ಗುರುತಿಸಿದ ಸ್ಥಳಗಳಲ್ಲಿಯೇ ಬೀದಿ ವ್ಯಾಪಾರಿಗಳು ವ್ಯಾಪಾರ ನಡೆಸಬೇಕು ಎಂದರು.

RELATED ARTICLES
- Advertisment -
Google search engine

Most Popular