ಬೆಂಗಳೂರು : ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಅವರ ಪುತ್ರಿ ಸುಮಾ ಎಸ್.ಸಾಹುಕಾರ್ ವಿರುದ್ಧ ನಕಲಿ ಆದಾಯ ಹಾಗೂ ಜಾತಿ ಪ್ರಮಾಣಪತ್ರ ಸಲ್ಲಿಸಿದ ಆರೋಪದಡಿ ಎಫ್‌ಐಆರ್ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಾನೂನು ಪ್ರಕಾರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಪಿಎಸ್‌ಸಿ ಸಂವಿಧಾನಾತ್ಮಕ ಸಂಸ್ಥೆಯಾಗಿರುವುದರಿಂದ ಕಾನೂನಿನ ಚೌಕಟ್ಟಿನಲ್ಲಿಯೇ ಈ ಪ್ರಕರಣವನ್ನು ನಿಭಾಯಿಸಬೇಕಾಗುತ್ತದೆ ಎಂದರು.
“ಇದು ಬೇಲಿಯೇ ಎದ್ದು ಹೊಲ ಮೇಯ್ದಂತಿರುವ ಪ್ರಕರಣ. ಇಂತಹ ಸಂದರ್ಭಗಳಲ್ಲಿ ಕಾನೂನು ಪ್ರಕಾರವೇ ಮುಂದುವರಿಯಬೇಕು. ಅಗತ್ಯವಿದ್ದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೇರಿ ಕಾನೂನು ತಿದ್ದುಪಡಿ ಸೇರಿದಂತೆ ವ್ಯವಸ್ಥೆಯ ಶುದ್ಧೀಕರಣದ ಬಗ್ಗೆ ನಿರ್ಧಾರ ಕೈಗೊಳ್ಳಬಹುದು. ಯುವಕರ ಭವಿಷ್ಯದೊಂದಿಗೆ ಚೆಲ್ಲಾಟ ನಡೆಯಬಾರದು,” ಎಂದು ಖರ್ಗೆ ಹೇಳಿದರು.
ಪ್ರಕರಣದಲ್ಲಿ ಎಫ್‌ಐಆರ್ ದಾಖಲಾಗಿದ್ದು, ಅದರ ಸತ್ಯಾಸತ್ಯತೆಯನ್ನು ತನಿಖೆ ಮತ್ತು ದಾಖಲೆಗಳ ಪರಿಶೀಲನೆಯ ಬಳಿಕವೇ ಸ್ಪಷ್ಟವಾಗಿ ಹೇಳಲು ಸಾಧ್ಯ ಎಂದು ತಿಳಿಸಿದ ಅವರು, ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆ ನಿಲ್ಲುವುದಿಲ್ಲ. ನೇಮಕಾತಿಗಳು ಎಂದಿನಂತೆ ಮುಂದುವರಿಯಲಿವೆ. ಭ್ರಷ್ಟಾಚಾರ ನಿಯಂತ್ರಣಕ್ಕೆ ಸರ್ಕಾರ ಈಗಾಗಲೇ ಕಾಯ್ದೆ ಜಾರಿಗೆ ತಂದಿದ್ದು, ಅದರ ನಿಯಮಾವಳಿಗಳನ್ನು ಇನ್ನೊಂದು ವಾರ ಅಥವಾ ಹತ್ತು ದಿನಗಳಲ್ಲಿ ಅಂತಿಮಗೊಳಿಸಲಾಗುವುದು ಎಂದು ಹೇಳಿದರು.
ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ವೇಳೆ ಸುಮಾ ಎಸ್.ಸಾಹುಕಾರ್ ಅವರು ನಕಲಿ ಆದಾಯ ಮತ್ತು ಜಾತಿ ಪ್ರಮಾಣಪತ್ರಗಳನ್ನು ಸಲ್ಲಿಸಿರುವ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪದ ಪ್ರಕಾರ, ತಮ್ಮ ಕುಟುಂಬದ ವಾರ್ಷಿಕ ಆದಾಯವನ್ನು ₹40,000 ಎಂದು ಘೋಷಿಸಿದ್ದರೆ, ಅವರ ತಂದೆ ಹಾಗೂ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಅವರ ಮಾಸಿಕ ವೇತನವೇ ಸುಮಾರು ₹2.25 ಲಕ್ಷವಾಗಿದೆ. ಈ ಹಿನ್ನೆಲೆಯಲ್ಲಿ ಮೀಸಲಾತಿ ಸೌಲಭ್ಯ ಪಡೆಯಲು ಸುಳ್ಳು ದಾಖಲೆಗಳನ್ನು ಬಳಸಿರುವ ಆರೋಪ ಕೇಳಿಬಂದಿದ್ದು, ಅಭ್ಯರ್ಥಿಗಳ ದಾಖಲೆ ಪರಿಶೀಲನೆ ವೇಳೆ ಈ ಅಂಶ ಬೆಳಕಿಗೆ ಬಂದಿದೆ.



