ಕಲಬುರಗಿ : ಬಿಡದಿ ಟೌನ್ಶಿಪ್ ಯೋಜನೆಗೆ ಸಂಬಂಧಿಸಿದಂತೆ ರೈತರ ಒಪ್ಪಿಗೆ ಇಲ್ಲದೆ ಭೂಮಿ ಸ್ವಾಧೀನಪಡಿಸಿಕೊಳ್ಳುವ ಪ್ರಯತ್ನವನ್ನು ರಾಜ್ಯ ಸರ್ಕಾರ ತಕ್ಷಣ ನಿಲ್ಲಿಸಬೇಕು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರೈತರ ಭಾವನೆಗಳಿಗೆ ವಿರುದ್ಧವಾಗಿ ಸರ್ಕಾರ ನಡೆದುಕೊಳ್ಳುತ್ತಿದೆ. ಬಿಡದಿಯಲ್ಲಿ 9 ರೆವೆನ್ಯೂ ಗ್ರಾಮಗಳ ವ್ಯಾಪ್ತಿಯ 26 ಹಳ್ಳಿಗಳು ಬರುತ್ತವೆ. ಶೇ.80 ರೈತರಿಂದ ಒಪ್ಪಿಗೆ ಪಡೆದಿದ್ದೇವೆ ಎಂದು ಸರ್ಕಾರ ಹೇಳುತ್ತಿದ್ದು, ಆದರೆ ವಾಸ್ತವದಲ್ಲಿ ಶೇ.90ರಿಂದ 95ರಷ್ಟು ರೈತರು ಭೂಮಿ ನೀಡಲು ಒಪ್ಪಿಗೆ ಸೂಚಿಸಿಲ್ಲ. ಆದರೂ ಸರ್ಕಾರ ರೈತರಿಂದ ಭೂಮಿ ಕಸಿದುಕೊಳ್ಳುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
ಬಿಡದಿ ಪ್ರಕರಣದಲ್ಲಿ ಅಧಿಕಾರಿಗಳ ವಿರುದ್ಧ ಆಕ್ರೋಶಗೊಂಡ ರೈತರು ಪೊರಕೆ ಏಟು ನೀಡಿದ ಘಟನೆಗೆ ಪ್ರತಿಕ್ರಿಯಿಸಿದ ಅವರು, ಇದು ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಿದ್ದು, ಇಲ್ಲಿ ಒಂದು ಎಕರೆಗಿಂತ ಕಡಿಮೆ ಜಮೀನು ಹೊಂದಿರುವ ರೈತರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರ ಭಾವನೆಗಳನ್ನು ಸರ್ಕಾರ ಗೌರವಿಸಬೇಕು. ಕೆಲವೇ ಕೆಲವು ರಿಯಲ್ ಎಸ್ಟೇಟ್ ಹಿತಾಸಕ್ತಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ನಡೆದುಕೊಳ್ಳದೆ, ಮುಖ್ಯಮಂತ್ರಿಗಳು ರೈತರ ಬದುಕಿಗೆ ಧಕ್ಕೆಯಾಗುವ ನಿರ್ಧಾರಗಳನ್ನು ಕೈಗೊಳ್ಳಬಾರದು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
ಇನ್ನೂ ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ರೈತರು ನಿರಂತರ ಪ್ರತಿಭಟನೆ ನಡೆಸುತ್ತಿದ್ದರೂ, ಸರ್ಕಾರವಾಗಲಿ ಅಥವಾ ಅಧಿಕಾರಿಗಳಾಗಲಿ ಅವರ ಸಮಸ್ಯೆ ಆಲಿಸುವ ಪ್ರಯತ್ನ ಮಾಡಿಲ್ಲ ಎಂದು ಅವರು ಟೀಕಿಸಿದರು.
ನಾನು ಸರ್ಕಾರಕ್ಕೆ ಸ್ಪಷ್ಟ ಎಚ್ಚರಿಕೆ ನೀಡುತ್ತಿದ್ದೇನೆ. ರೈತರ ಒಪ್ಪಿಗೆ ಇದ್ದರೆ ಮಾತ್ರ ಭೂಮಿ ಸ್ವಾಧೀನಪಡಿಸಿಕೊಳ್ಳಿ. ಒಬ್ಬ ರೈತನಾದರೂ ವಿರೋಧ ವ್ಯಕ್ತಪಡಿಸಿದರೆ ಆ ಪ್ರಕ್ರಿಯೆಯನ್ನು ಕೈಬಿಡಿ ಎಂದು ಒತ್ತಾಯಿಸಿದರು.



