ಬೆಂಗಳೂರು : ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ನಿಯಂತ್ರಣಕ್ಕೆ ತಂತ್ರಜ್ಞಾನ ಆಧಾರಿತ ಪರಿಹಾರಗಳನ್ನು ಅಳವಡಿಸಿಕೊಳ್ಳಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು ಸಂಚಾರ ಪೊಲೀಸರಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು ಸಂಚಾರ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ನಗರದ ಪ್ರಮುಖ ಜಂಕ್ಷನ್ಗಳು ಹಾಗೂ ಹೆಚ್ಚು ವಾಹನ ಸಂಚಾರವಿರುವ ರಸ್ತೆಗಳಲ್ಲಿ ವೈಜ್ಞಾನಿಕ ಮತ್ತು ತಂತ್ರಜ್ಞಾನ ಆಧಾರಿತ ವ್ಯವಸ್ಥೆಗಳನ್ನು ಜಾರಿಗೆ ತಂದು ಸಾರ್ವಜನಿಕರಿಗೆ ಸುಗಮ ಹಾಗೂ ಸುರಕ್ಷಿತ ಸಂಚಾರ ವ್ಯವಸ್ಥೆ ಕಲ್ಪಿಸುವಂತೆ ನಿರ್ದೇಶನ ನೀಡಿದರು.
ತೀವ್ರ ಸಂಚಾರ ದಟ್ಟಣೆ ಇರುವ ಪ್ರದೇಶಗಳಲ್ಲಿ ಇಂಟೆಲಿಜೆಂಟ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಮ್ (ITMS), ಕೃತಕ ಬುದ್ಧಿಮತ್ತೆ (AI), ಸ್ಮಾರ್ಟ್ ಟ್ರಾಫಿಕ್ ಸಿಗ್ನಲ್ಗಳು, ನೈಜ ಸಮಯದ ಸಂಚಾರ ಮೇಲ್ವಿಚಾರಣೆ ಹಾಗೂ ಮಾಹಿತಿ ಆಧಾರಿತ ಸಂಚಾರ ನಿರ್ವಹಣಾ ಕ್ರಮಗಳನ್ನು ಜಾರಿಗೆ ತರಲು ಸಮಗ್ರ ಕಾರ್ಯಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಅಪಘಾತಗಳು ಹೆಚ್ಚಾಗಿ ಸಂಭವಿಸುವ ಸ್ಥಳಗಳನ್ನು ಗುರುತಿಸಿ ವಿಶೇಷ ಕ್ರಮ ಕೈಗೊಳ್ಳಬೇಕು. ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು, ಆ್ಯಂಬುಲೆನ್ಸ್ ಸೇರಿದಂತೆ ತುರ್ತು ಸೇವೆಗಳ ವಾಹನಗಳಿಗೆ ಆದ್ಯತೆ ನೀಡುವುದು ಹಾಗೂ ಪಾದಚಾರಿಗಳ ಸುರಕ್ಷತೆಗೆ ಹೆಚ್ಚಿನ ಗಮನ ಹರಿಸುವಂತೆ ಸಚಿವರು ಹೇಳಿದರು.
ಸಂಚಾರ ನಿರ್ವಹಣೆ ಕೇವಲ ಪೊಲೀಸ್ ಇಲಾಖೆಯ ಜವಾಬ್ದಾರಿಯಲ್ಲ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA), ಬೆಂಗಳೂರು ಮೆಟ್ರೋ ರೈಲು ನಿಗಮ (BMRCL), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC), ನಗರಾಭಿವೃದ್ಧಿ ಇಲಾಖೆ ಸೇರಿದಂತೆ ಎಲ್ಲ ಸಂಬಂಧಿತ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಶಾಶ್ವತ ಪರಿಹಾರ ಸಾಧ್ಯ ಎಂದು ಪ್ರಿಯಾಂಕ್ ಖರ್ಗೆ ಅಭಿಪ್ರಾಯಪಟ್ಟರು.
ಸಭೆಯಲ್ಲಿ ವಿವಿಧ ಸಂಚಾರ ವಿಭಾಗಗಳ ಡಿಸಿಪಿಗಳು ತಮ್ಮ ವ್ಯಾಪ್ತಿಯ ಸಂಚಾರ ಪರಿಸ್ಥಿತಿ, ದಟ್ಟಣೆ ಪ್ರದೇಶಗಳು ಹಾಗೂ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು. ಆಧುನಿಕ ತಂತ್ರಜ್ಞಾನ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಇಲಾಖೆಗಳ ಸಮನ್ವಯದ ಮೂಲಕ ಬೆಂಗಳೂರಿನ ಸಂಚಾರ ವ್ಯವಸ್ಥೆ ಸುಧಾರಿಸಲು ಸಮಗ್ರ ಕಾರ್ಯತಂತ್ರ ರೂಪಿಸುವ ಕುರಿತು ಚರ್ಚಿಸಲಾಯಿತು.
ಬೆಂಗಳೂರು ಜಾಗತಿಕ ಮಟ್ಟದಲ್ಲಿ ತನ್ನದೇ ಆದ ಗುರುತನ್ನು ಹೊಂದಿದೆ. ಪ್ರಮುಖ ಮಾಹಿತಿ ತಂತ್ರಜ್ಞಾನ ಸಂಸ್ಥೆಗಳು, ಬಹುರಾಷ್ಟ್ರೀಯ ಕಂಪನಿಗಳು ಹಾಗೂ ಹೂಡಿಕೆದಾರರು ನಗರವನ್ನು ತಮ್ಮ ಕೇಂದ್ರವನ್ನಾಗಿ ಆಯ್ಕೆ ಮಾಡುತ್ತಿದ್ದಾರೆ. ಜಾಗತಿಕ ನಗರಕ್ಕೆ ತಕ್ಕ ಸಂಚಾರ ವ್ಯವಸ್ಥೆ ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.
ಸಭೆಯಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಮಹಾನಿರೀಕ್ಷಕ ಎಂ.ಎ. ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.



