ಬೆಂಗಳೂರು : ಶಾಂತಿಯುತ ಪ್ರತಿಭಟನೆ ನಡೆಸುವುದು ಪ್ರತಿಯೊಬ್ಬರ ಹಕ್ಕು. ಆದರೆ ಪ್ರತಿಭಟನೆಯ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆ, ಕಲ್ಲು ತೂರಾಟ ಹಾಗೂ ಕಾನೂನು ಕೈಗೆತ್ತಿಕೊಳ್ಳುವುದನ್ನು ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ ಎಂದು ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ನಡೆಯುತ್ತಿರುವ ರೈತರ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿ ಶಾಂತಿಯುತ ಪ್ರತಿಭಟನೆಗೆ ಸರ್ಕಾರದ ವಿರೋಧವಿಲ್ಲ. ಆದರೆ ಸರ್ಕಾರಿ ಅಧಿಕಾರಿಗಳ ಮೇಲೆ ಪೊರಕೆಯಿಂದ ಹಲ್ಲೆ ನಡೆಸುವುದು, ಕಲ್ಲು ತೂರಾಟ ನಡೆಸುವುದು ಸರಿಯಲ್ಲ. ಇಂತಹ ಘಟನೆಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬಿಡದಿಯಲ್ಲಿ ಸರ್ವೇ ಅಧಿಕಾರಿಯೊಬ್ಬರ ಮೇಲೆ ಪೊರಕೆಯಿಂದ ಹಲ್ಲೆ ನಡೆಸಲಾಗಿದ್ದು, ಕಲ್ಲು ತೂರಾಟದ ಘಟನೆಗಳೂ ನಡೆದಿವೆ. ಈ ಸಂಬಂಧ ರೈತರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೇಳಿದರು.
ಬಿಡದಿ ಟೌನ್‌ಶಿಪ್ ಯೋಜನೆಗೆ ಜನರಿಂದ ವಿರೋಧ ವ್ಯಕ್ತವಾಗುತ್ತಿರುವುದು ಸರ್ಕಾರದ ಗಮನದಲ್ಲಿದೆ. ಕಾನೂನುಬದ್ಧವಾಗಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದರೆ ಯಾರೂ ವಿರೋಧಿಸುವುದಿಲ್ಲ. ಆದರೆ ರಾಜಕೀಯ ಒತ್ತಡ ಅಥವಾ ಇತರ ಕಾರಣಗಳಿಂದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದರೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.
ಇದೇ ವೇಳೆ ಸಚಿವ ಸಂಪುಟ ವಿಸ್ತರಣೆ ಕುರಿತು ಮಾತನಾಡಿದ ಪರಮೇಶ್ವರ್, ಶೀಘ್ರದಲ್ಲೇ ವಿಧಾನಮಂಡಲ ಅಧಿವೇಶನ ನಡೆಯುವ ಸಾಧ್ಯತೆ ಇದೆ. ಸಚಿವ ಸಂಪುಟ ವಿಸ್ತರಣೆ ಇನ್ನೂ ನಡೆದಿಲ್ಲವಾದರೂ, ರಾಜ್ಯದ ರಾಜಕೀಯ ಬೆಳವಣಿಗೆಗಳನ್ನು ಸಮರ್ಥವಾಗಿ ಎದುರಿಸಲಾಗುವುದು ಎಂದರು.
ಸಂಪುಟದಲ್ಲಿನ ಖಾಲಿ ಸ್ಥಾನಗಳ ಕುರಿತು ಪ್ರತಿಕ್ರಿಯಿಸಿದ ಅವರು, ಸಚಿವ ಸಂಪುಟದಲ್ಲಿ ಇನ್ನೂ 20 ಸ್ಥಾನಗಳು ಖಾಲಿ ಇವೆ. ಅವುಗಳನ್ನು ಭರ್ತಿ ಮಾಡುವ ಕುರಿತು ಪಕ್ಷದ ಹೈಕಮಾಂಡ್ ಚರ್ಚೆ ನಡೆಸುತ್ತಿದೆ. ರಾಹುಲ್ ಗಾಂಧಿ ಕೂಡ ವಿದೇಶ ಪ್ರವಾಸದಿಂದ ಮರಳಿದ್ದಾರೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ತೀರ್ಮಾನವಾಗುವ ಸಾಧ್ಯತೆ ಇದೆ ಎಂದು ಹೇಳಿದರು.



