ಮೈಸೂರು : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಗೃಹ ಸಚಿವರು ತಮ್ಮ ಜವಾಬ್ದಾರಿಯನ್ನು ಮರೆತಿದ್ದಾರೆ ಎಂದು ಮೈಸೂರು ನಗರ ಬಿಜೆಪಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎಲ್. ನಾಗೇಂದ್ರ ತೀವ್ರವಾಗಿ ಟೀಕಿಸಿದ್ದಾರೆ.
ಮೈಸೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇತ್ತೀಚಿನ ಘಟನೆಗಳನ್ನು ಉಲ್ಲೇಖಿಸಿ ರಾಜ್ಯ ಸರ್ಕಾರದ ವೈಫಲ್ಯವನ್ನು ತರಾಟೆಗೆ ತೆಗೆದುಕೊಂಡರು.
ಗೃಹ ಸಚಿವರ ತವರು ಜಿಲ್ಲೆಯಲ್ಲೇ ಕೈದಿಗಳು ಜೈಲಿನಿಂದ ಪರಾರಿಯಾಗಿರುವುದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಯಾವ ಮಟ್ಟಕ್ಕೆ ಕುಸಿದಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಗೃಹ ಸಚಿವರು ತಮ್ಮ ಇಲಾಖೆಯ ಕೆಲಸಗಳನ್ನು ಬಿಟ್ಟು ಬೇರೆ ಅನಗತ್ಯ ವಿಷಯಗಳಲ್ಲಿ ನಿರತರಾಗಿದ್ದಾರೆ ಎಂದು ಕಿಡಿಕಾರಿದರು.
ಹೆಚ್ಚುತ್ತಿರುವ ಅಪರಾಧ ಕೃತ್ಯಗಳು
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಪರಾಧ ಕೃತ್ಯಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದ ಅವರು, ಪ್ರಮುಖವಾಗಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ನಡೆಯುತ್ತಿರುವ ಫೈರಿಂಗ್ (ಗುಂಡಿನ ದಾಳಿ) ಮತ್ತು ದರೋಡೆ ಪ್ರಕರಣಗಳನ್ನು ಪ್ರಸ್ತಾಪಿಸಿದರು.
ರಾಜ್ಯದಲ್ಲಿ ಗೃಹ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ. ಸಾರ್ವಜನಿಕರಲ್ಲಿ ಅಥವಾ ಅಪರಾಧಿಗಳಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ಇದ್ದ ಭಯ ಸಂಪೂರ್ಣವಾಗಿ ಮಾಯವಾಗಿದೆ. ಗೃಹ ಸಚಿವರು ತಕ್ಷಣವೇ ಎಚ್ಚೆತ್ತುಕೊಂಡು, ಇಲಾಖೆಯ ಕಾರ್ಯಕ್ಷಮತೆ ಮತ್ತು ಕಾನೂನು ಸುವ್ಯವಸ್ಥೆಯನ್ನು ಸುಧಾರಿಸುವತ್ತ ಗಮನಹರಿಸಬೇಕು ಎಂದು ಅವರು ಆಗ್ರಹಿಸಿದರು.



