ಕೊಪ್ಪಳ : ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ಅಕ್ರಮ ಮದ್ಯ ಮಾರಾಟ ಹೆಚ್ಚಾಗಿದ್ದು, ಇದರಿಂದ ಬೇಸತ್ತ ಮಹಿಳೆಯರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಪಟ್ಟಣದ 16ನೇ ವಾರ್ಡ್‌ನಲ್ಲಿ ಅಕ್ರಮ ಮದ್ಯ ಮಾರಾಟ ಮಿತಿ ಮೀರಿದೆ ಎಂದು ಆರೋಪಿಸಿರುವ ಸ್ಥಳೀಯರು, ಸಣ್ಣ ಕಿರಾಣಿ ಅಂಗಡಿಗಳು, ಹೋಟೆಲ್‌ಗಳು ಹಾಗೂ ಕೆಲವು ಮನೆಗಳೇ ಮದ್ಯ ಮಾರಾಟದ ಕೇಂದ್ರಗಳಾಗಿವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಲ್ಲದೆ ಲೈಸೆನ್ಸ್ ಇಲ್ಲದೆ ಹಲವು ಕಡೆಗಳಲ್ಲಿ ರಾಜಾರೋಷವಾಗಿ ಮದ್ಯ ಮಾರಾಟ ನಡೆಯುತ್ತಿದೆ ಎಂದು ನಿವಾಸಿಗಳು ಆರೋಪಿಸಿದ್ದಾರೆ. ಕೆಲವು ಸ್ಥಳಗಳಲ್ಲಿ ಮದ್ಯ ಮಾರಾಟದ ದೃಶ್ಯಗಳನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು, ಅವು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಕಾನೂನಿನ ಭಯವಿಲ್ಲದೆ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದು, ಮಕ್ಕಳಿಗೂ ಮದ್ಯ ಸಿಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಹಿಳೆಯರು, ಮದ್ಯದ ಹಾವಳಿಯಿಂದ ಕುಟುಂಬಗಳ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂದು ಅಳಲು ತೋಡಿಕೊಂಡಿದ್ದಾರೆ.
ದುಡಿದ ಹಣವನ್ನು ಕೆಲವರು ಮದ್ಯಕ್ಕೆ ಖರ್ಚು ಮಾಡುತ್ತಿರುವುದರಿಂದ ಮನೆಗಳಲ್ಲಿ ಊಟಕ್ಕೂ ತೊಂದರೆಯಾಗುತ್ತಿದೆ. ಸಂಜೆ ವೇಳೆಯಲ್ಲಿ ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ಓಡಾಡಲು ಭಯಪಡುವ ವಾತಾವರಣ ನಿರ್ಮಾಣವಾಗಿದೆ ಎಂದು ಅವರು ಹೇಳಿದ್ದಾರೆ. ಅಕ್ರಮ ಮದ್ಯ ಮಾರಾಟವನ್ನು ತಕ್ಷಣ ನಿಲ್ಲಿಸಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಮಹಿಳೆಯರು ಎಚ್ಚರಿಕೆ ನೀಡಿದ್ದಾರೆ.
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ : ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿಯೂ ಇಂತಹ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದರೂ ಅಬಕಾರಿ ಹಾಗೂ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದು, ಅಕ್ರಮ ಮದ್ಯದ ಅಡ್ಡೆಗಳ ವಿರುದ್ಧ ತಕ್ಷಣ ದಾಳಿ ನಡೆಸಿ, ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ವಾರ್ಡ್‌ಗಳಲ್ಲಿ ಪೊಲೀಸ್ ಗಸ್ತು ಹೆಚ್ಚಿಸಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಬೇಡಿಕೆಯಾಗಿದೆ.



