ಮಂಡ್ಯ: ಮಂಡ್ಯ ಜಿಲ್ಲಾ ಪೊಲೀಸ್ ಪೆರೇಡ್ ಮೈದಾನದಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಧ್ವಜಾರೋಹಣ ನೆರೆವೇರಿಸಿದರು.
ಮೊದಲಿಗೆ ನಾಡಗೀತೆ, ರೈತಗೀತೆ ಹಾಡಲಾಯಿತು. ಬಳಿಕ ಪೊಲೀಸ್ ಇಲಾಖೆ ಸೇರಿದಂತೆ ವಿವಿಧ ತಂಡಗಳಿಂದ ಆಕರ್ಷಕ ಪಥಸಂಚಲನ ನಡೆಸಲಾಯಿತು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಗೌರವ ವಂದನೆ ಸ್ವೀಕರಿಸಿದರು.
ಬಳಿಕ ಮಾತನಾಡಿದ ಅವರು, ಜಿಲ್ಲೆಯ ಜನತೆಗೆ 77ನೇ ಸ್ವಾತಂತ್ರ್ಯ ದಿನದ ಶುಭಾಶಯಗಳನ್ನು ಕೋರಿದರು.
ಬ್ರಿಟಿಷರ ಕಪಿಮುಷ್ಟಿಯಿಂದ ಬಿಡುಗಡೆ ಸಿಕ್ಕಿ ಸ್ವಾತಂತ್ರ್ಯ ಸಿಕ್ಕಿದೆ. ಮಂಡ್ಯ ಜಿಲ್ಲೆಯಲ್ಲಿ ಸ್ವಾತಂತ್ರ್ಯೋತ್ಸವ ಅಂದ್ರೆ ನೆನಾಪಾಗೋದು ಶಿವಪುರದ ಸತ್ಯಾಗ್ರಹ. ಧೈರ್ಯವಾಗಿ ಭಾರತದ ಧ್ವಜವನ್ನು ಹಾರಿಸಿದರು. ಆ ನೆನಪಿಗೆ ಸತ್ಯಾಗ್ರಹ ಸೌದ ಅದನ್ನು ಕಾಪಾಡಿಕೊಂಡು ಹೋಗುವುದು ನಮ್ಮ ಕರ್ತವ್ಯ ಎಂದು ಹೇಳಿದರು.
ಎಲ್ಲಾ ಭಾರತೀಯರು ಒಗ್ಗಟ್ಟಿನಲ್ಲಿ ಬಲ ತೋರಿಸಿ ದೇಶಕ್ಕಾಗಿ ಪ್ರಾಣತ್ಯಾಗ ಕೊಟ್ಟವರನ್ನು ನೆನಪಿಸಿಕೊಳ್ಳಬೇಕು. ಜಗತ್ತಿನಲ್ಲಿ ಭಾರತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಅಂಬೇಡ್ಕರ್ ಕೊಡುಗೆಯನ್ನು ನಾವು ಸ್ಮರಿಸಬೇಕು ಎಂದು ಹೇಳಿದರು.

ಸರ್ಕಾರ ರಾಜ್ಯದ ಅಭಿವೃದ್ಧಿಗೆ ಹಲವು ಯೋಜನೆ ಜಾರಿಮಾಡಿದ್ದು, ನಮ್ಮ ಸರ್ಕಾರ ನುಡಿದಂತ ನಡೆದಿದೆ. ಐದು ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿಯೋಜನೆ, ಉಚಿತ ಅನ್ನಭಾಗ್ಯ ಯೋಜನೆಯನ್ನು ಜನರಿಗೆ ಕೊಟ್ಟಿದೆ. ಶಕ್ತಿ ಯೋಜನೆಯಿಂದ ಮಹಿಳೆಯರು ಸದುಪಯೋಗ ಪಡಿಸಿಕೊಂಡಿದ್ದಾರೆ. ಆಹಾರದ ಕೊರತೆ ಇಲ್ಲದೆ ಪ್ರತಿ ವ್ಯಕ್ತಿಗೆ ಅನ್ನ ಭಾಗ್ಯ ಯೋಜನೆ ಕೊಟ್ಟಿದೆ. ಮಂಡ್ಯ ಜಿಲ್ಲೆಯ ಜನರಿಗೆ ನಮ್ಮ ಯೋಜನೆ ತಲುಪಿದೆ ಎಂದು ಹೇಳಿದರು.
ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಶಾಸಕ ಗಣಿಗ ರವಿಕುಮಾರ್, ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮಧು ಜಿ ಮಾದೇಗೌಡ, ಚಲುವರಾಯಸ್ವಾಮಿ ಪತ್ನಿ ಧನಲಕ್ಷ್ಮಿ, ಡಿಸಿ ಡಾ. ಕುಮಾರ್, ಎಸ್ಪಿ ಎನ್.ಯತೀಶ್, ಸಿಇಒ ಶೇಖ್ ತನ್ವೀರ್ ಆಸೀಫ್ ಸೇರಿ ಹಲವರು ಭಾಗಿಯಾಗಿದ್ದರು.