ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಮಾರಾಟ ಮಾಡುತ್ತಿದ್ದ ಕುಖ್ಯಾತ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಆರೋಪಿಯೋರ್ವನು ಬೆಂಗಳೂರಿನಿಂದ MDMA ಮಾದಕ ವಸ್ತುವನ್ನು ಖರೀದಿಸಿಕೊಂಡು ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಮಾರುತಿ 800 ಕಾರಿನಲ್ಲಿಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿಯವರಾದ ಪಿ ಎ ಹೆಗಡೆ ರವರ ನೇತೃತ್ವದ ಸಿಸಿಬಿ ಪೊಲೀಸರು ದಾಳಿ ನಡೆಸಿ (Methylene dioxy methamphetamine) MDMA ಎಂಬ ನಿಷೇದಿತ ಮಾದಕ ವಸ್ತುವನ್ನು ಹೊಂದಿದ್ದ ಹಸನ್ ಸಾಧಿಕ್ @ ಬ್ಲೇಡ್ ಸಾಧಿಕ್(35) ಎಂಬಾತನನ್ನು ವಶಕ್ಕೆ ಪಡೆದುಕೊಂಡು ಆತನ ವಶದಿಂದ ಒಟ್ಟು 50 ಗ್ರಾಂ ತೂಕದ ರೂ. 2,50,000/-ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮಾರುತಿ 800 ಕಾರು, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ರೂ 3,65,500/- ಆಗಬಹುದು. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕ ವಸ್ತು ಮಾರಾಟ ಜಾಲದ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ.
ಆರೋಪಿ ಹಸನ್ ಸಾದಿಕ್ @ ಬ್ಲೇಡ್ ಸಾದಿಕ್ ಎಂಬಾತನ ವಿರುದ್ಧ ಈ ಹಿಂದೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಒಟ್ಟು 8 ಹಲ್ಲೆ, ಬೆದರಿಕೆ ಪ್ರಕರಣಗಳು, 4 ಕೊಲೆ ಯತ್ನ ಪ್ರಕರಣ, ಪುತ್ತೂರು ನಗರ ಠಾಣೆಯಲ್ಲಿ 2 ಕೊಲೆ ಯತ್ನ ಪ್ರಕರಣ,ಉಪ್ಪಿನಂಗಡಿ ಠಾಣೆಯಲ್ಲಿ ಮಾನಭಂಗ ಹಾಗೂ ಕಿಡ್ನಾಫ್ ಪ್ರಕರಣ, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಹಲ್ಲೆ ಪ್ರಕರಣ, ಕಾವೂರು ಪೊಲೀಸ್ ಠಾಣೆಯಲ್ಲಿ ದರೋಡೆಗೆ ಯತ್ನ ಪ್ರಕರಣ, ಬೆಂಗಳೂರು ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟ ಹೀಗೆ ಒಟ್ಟು 17 ಪ್ರಕರಣಗಳು ದಾಖಲಾಗಿದ್ದು, ಈತನು ಸುಮಾರು 6 ತಿಂಗಳಿನಿಂದ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದು, ಈತನ ವಿರುದ್ಧ ನ್ಯಾಯಾಲಯವು ವಾರೆಂಟ್ ಹೊರಡಿಸಲಾಗಿರುತ್ತದೆ.
ಆರೋಪಿ ಮತ್ತು ಮಾದಕ ವಸ್ತು ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ನರೇಂದ್ರ, ಶರಣಪ್ಪ ಭಂಡಾರಿ, ಸುದೀಪ್ ಎಂ ವಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.