ಬೆಂಗಳೂರು: ಬಿಜೆಪಿಯ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯನಾಯ್ಡು ಇಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಆಪರೇಷನ್ ಹಸ್ತದ ಚಟುವಟಿಕೆಗಳು ಬಿರುಸಿನಿಂದ ನಡೆಯುತ್ತಿರುವ ಹಂತದಲ್ಲಿ ಕಟ್ಟಾ ಸುಬ್ರಹ್ಮಣ್ಯನಾಯ್ಡು ಅವರ ಈ ಭೇಟಿ ಮತ್ತಷ್ಟು ಕುತೂಹಲ ಕೆರಳಿಸಿದೆ.
ಇದೊಂದು ಸೌಜನ್ಯಯುತವಾದ ಭೇಟಿ ಎಂದು ವ್ಯಾಖ್ಯಾನಿಸಲಾಗುತ್ತಿದೆಯಾದರೂ ತೆರೆಮರೆಯ ವದಂತಿಗಳು ಬೇರೆಯದೇ ಸಂದೇಶ ರವಾನೆ ಮಾಡುತ್ತಿದೆ. ಕಟ್ಟಾ ಸುಬ್ರಹ್ಮಣ್ಯನಾಯ್ಡು ಬಿಜೆಪಿಯಲ್ಲಿ ಪ್ರಬಲ ನಾಯಕರಾಗಿದ್ದರು. ಹಿಂದೆ ಯಡಿಯೂರಪ್ಪ ಅವರ ಸರ್ಕಾರದಲ್ಲಿ ಸಚಿವರಾಗಿ ಕೆಲಸ ಮಾಡಿದ್ದರು.
ಕಾಂಗ್ರೆಸ್ ಲೋಕಸಭೆ ಚುನಾವಣೆಯಲ್ಲಿ ಗರಿಷ್ಠ ಸ್ಥಾನಗಳನ್ನು ಗೆಲ್ಲಬೇಕು ಎಂಬ ಹಠಕ್ಕೆ ಬಿದ್ದಿದ್ದು, ಜೆಡಿಎಸ್ ಮತ್ತು ಬಿಜೆಪಿಯಲ್ಲಿರುವ ಪ್ರಭಾವಿ ನಾಯಕರನ್ನು ಸೆಳೆದುಕೊಳ್ಳುವ ಪ್ರಯತ್ನ ಮಾಡುತ್ತಿದೆ. ಇಂದು ಡಿ.ಕೆ.ಶಿವಕುಮಾರ್ ಮತ್ತು ಕಟ್ಟಾಸುಬ್ರಹ್ಮಣ್ಯನಾಯ್ಡು ಭೇಟಿಯ ಬಳಿಕ ಇಂತಹ ಚರ್ಚೆಗಳಿಗೆ ಮತ್ತಷ್ಟು ರೆಕ್ಕೆಪುಕ್ಕ ಬಂದಂತಾಗಿದೆ.