ಚಾಮರಾಜನಗರ: ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮದಡಿ ಬೇಯಿಸಿದ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಿಸುವ ಕಾರ್ಯಕ್ರಮಕ್ಕೆ ಇಂದು ಚಾಲನೆ ದೊರೆಯಿತು.
ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಯಲ್ಲಿಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಿಲ್ಲಾ ಪಂಚಾಯತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ವಿದ್ಯಾರ್ಥಿನಿಯರಿಗೆ ಬೇಯಿಸಿದ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ನೀಡುವ ಮೂಲಕ ಪೂರಕ ಪೌಷ್ಠಿಕ ಆಹಾರ ವಿತರಣೆಗೆ ಚಾಲನೆ ನೀಡಿದರು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಶಾಲೆಗಳಲ್ಲಿ 1 ರಿಂದ 8ನೇ ತರಗತಿ ಮಕ್ಕಳಿಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿಯನ್ನು ನೀಡಲಾಗುತ್ತಿತ್ತು. ಮುಖ್ಯಮಂತ್ರಿಯವ ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರ್ಕಾರÀ 9 ರಿಂದ 10ನೇ ತರಗತಿವರೆಗಿನ ಮಕ್ಕಳಿಗೂ ಪೂರಕ ಪೌಷ್ಠಿಕ ಆಹಾರ ವಿತರಿಸಲು ಬಜೆಟ್ ನಲ್ಲಿ ಘೋಷಣೆ ಮಾಡಿದ್ದರು. ಅದರಂತೆ ಇಂದು 1 ರಿಂದ 10ನೇ ತರಗತಿ ವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕ ಆಹಾರ ಕಾರ್ಯಕ್ರಮದಡಿ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ನೀಡಲಾಗುತ್ತಿದೆ ಎಂದರು.
ಆಹಾರ ಸೇವನೆಯ ಆಯ್ಕೆ ಹಕ್ಕು ಪ್ರತಿಯೊಬ್ಬರಿಗೂ ಇದೆ. ಮೊಟ್ಟೆ ಸೇವನೆ ಇಷ್ಟವಾಗದಿರುವವರಿಗೆ ಬಾಳೆಹಣ್ಣು ಅಥವಾ ಶೇಂಗಾ ಚಿಕ್ಕಿ ಕೊಡಲಾಗುತ್ತಿದೆ. ಬೆಳೆಯುವ ಮಕ್ಕಳಿಗೆ ಆರೋಗ್ಯ ದೃಷ್ಠಿಯಿಂದ ಪೌಷ್ಠಿಕ ಆಹಾರ ಸಿಗಬೇಕು ಎನ್ನುವ ಉದ್ದೇಶದಿಂದ ಸರ್ಕಾರ ಕಾರ್ಯಕ್ರಮ ವಿಸ್ತರಣೆ ಮಾಡಿದೆ. ಇದರ ಸದುಪಯೋಗವಾಗಬೇಕೆಂದು ಶಾಸಕರು ತಿಳಿಸಿದರು. ವಿದ್ಯಾರ್ಥಿಗಳು ಓದಿನ ಜೊತೆಗೆ ಒಂದಲ್ಲ ಒಂದು ಉತ್ತಮ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು. ಶೈಕ್ಷಣಿಕ ಅಭಿವೃದ್ದಿಗಾಗಿ ನೀಡಲಾಗುತ್ತಿರುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ವ್ಯಾಸಂಗದಲ್ಲಿ ಹೆಚ್ಚಿನ ಆಸಕ್ತಿ ವಹಿಸಿ ಶಾಲೆಗೆ ಒಳ್ಳೆಯ ಹೆಸರು ಕೀರ್ತಿ ತರಬೇಕು. ಉನ್ನತ ಮಟ್ಟಕ್ಕೆ ವಿದ್ಯಾರ್ಥಿಗಳು ಏರಬೇಕು ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಸಲಹೆ ಮಾಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಮಾತನಾಡಿ ಸಧೃಢ ದೇಹವಿದ್ದರೆ ಸದೃಢ ಮನಸ್ಸು ಸಹ ಇರುತ್ತದೆ. ಹೀಗಾಗಿ ಸರ್ಕಾರ ಪೂರಕ ಪೌಷ್ಠಿಕ ಆಹಾರವನ್ನು ಎಲ್ಲಾ ವಿದ್ಯಾರ್ಥಿಗಳಿಗೆ ನೀಡುತ್ತಿದೆ. ಶಿಕ್ಷಣ ಶ್ರೇಯೋಭಿವೃದ್ದಿಗಾಗಿ ಸಮಾನ ಅವಕಾಶಗಳನ್ನು ಕಲ್ಪಿಸಿದೆ. ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲೂ ಅದರಲ್ಲೂ ಶಾರೀರಿಕ ಬಲವರ್ಧನೆಗೆ ಪೂರಕವಾದ ಚಟುವಟಿಕೆಗಳಲ್ಲಿ ಭಾಗಿಯಾಗಬೇಕು ಎಂದರು. ನಗರಸಭಾ ಸದಸ್ಯ ಮಹೇಶ್ ಅವರು ಮಾತನಾಡಿ ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಬಿಸಿಯೂಟದ ಜೊತೆಗೆ ಪೌಷ್ಠಿಕ ಆಹಾರವನ್ನು ಎಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಸರ್ಕಾರಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಮಕ್ಕಳು ಸಹ ಸರ್ಕಾರದ ಯೋಜನೆಗಳನ್ನು ಬಳಕೆ ಮಾಡಿಕೊಂಡು ಪೋಷಕರಿಗೆ, ಶಿಕ್ಷಕರಿಗೆ ಗೌರವ ತರುವಂತಾಗಬೇಕು ಎಂದರು.
ಶಾಲಾಭಿವೃದ್ದಿ ಸಮಿತಿಯ ಅಧ್ಯಕ್ಷರಾದ ಕವಿತಾ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ ಪ್ರಸನ್ನ, ಅಕ್ಷರ ದಾಸೋಹ ಅಧಿಕಾರಿ ಗುರುಲಿಂಗಯ್ಯ, ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಎಂ. ಕಾಶಿನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಣ್ಣೇಗೌಡ, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲರಾದ ಹೆಚ್.ಎನ್. ನಂಜುಂಡಸ್ವಾಮಿ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಹೆಚ್ಚುವರಿ ಜಿಲ್ಲಾಧಿಕರಿ ಗೀತಾ ಹುಡೇದ, ನಗರಸಭಾ ಸದಸ್ಯರಾದ ಮಹೇಶ್, ಅಧಿಕಾರಿಗಳು ಕಾರ್ಯಕ್ರಮದ ಬಳಿಕ ಶಾಲಾ ಆವರಣದಲ್ಲಿ ಕುಳಿತು ವಿದ್ಯಾರ್ಥಿನಿಯರೊಂದಿಗೆ ಬಿಸಿಯೂಟ, ಪೌಷ್ಠಿಕ ಆಹಾರ ಸೇವನೆ ಮಾಡಿದರು.