ಬೆಂಗಳೂರು : ಮದರಸಾಗಳಲ್ಲಿ ಕನ್ನಡ ಮತ್ತು ಇಂಗ್ಲಿಷ್ ಸೇರಿದಂತೆ ವಿಜ್ಞಾನ, ಗಣಿತ ವಿಷಯಗಳನ್ನು ಕಲಿಸಲು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದರು. ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ ಸಭಾಂಗಣದಲ್ಲಿ ಇಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮದರಸಾಗಳಲ್ಲಿ ಪ್ರಮುಖವಾಗಿ ಕನ್ನಡ ಕಡ್ಡಾಯವಾಗಿ ಕಲಿಸಲೇಬೇಕು. ಉಳಿದಂತೆ, ಇಂಗ್ಲಿಷ್ ಸೇರಿ ಇತರೆ ಭಾಷೆ ಕಲಿಸಲು ಕ್ರಮ ಕೈಗೊಳ್ಳಿ ಎಂದು ನಿರ್ದೇಶನ ನೀಡಿದರು.
ರಾಜ್ಯದಲ್ಲಿ ೧,೨೬೫ ವಕ್ಫ್ ಮಂಡಳಿಯಲ್ಲಿ ನೋಂದಣಿಯಾದ ಮದರಸಾಗಳಿದ್ದು, ಆ ಪೈಕಿ ೧೦೦ ಮದರಸಾಗಳ ಐದು ಸಾವಿರ ಮಕ್ಕಳಿಗೆ ಈ ವರ್ಷದಿಂದಲೇ ಪ್ರಾಯೋಗಿಕವಾಗಿ ಕಲಿಕೆ ಆರಂಭಿಸಿ. ಮುಂದಿನ ವರ್ಷದಿಂದ ಎಲ್ಲಾ ಮದರಸಾಗಳಲ್ಲಿ ಆರಂಭಿಸಲು ಪ್ರಸ್ತಾವನೆ ಸಿದ್ಧಪಡಿಸಿ ಎಂದು ಅಧಿಕಾರಿಗಳಿಗೆ ಹೇಳಿದರು. ಮದರಸಾಗಳಲ್ಲಿ ಕನ್ನಡ, ಇಂಗ್ಲಿಷ್ ಸೇರಿ ಇತರೆ ವಿಷಯ ಕಲಿಕೆಯಿಂದ ಅಲ್ಲಿನ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಉತ್ತಮ ಅವಕಾಶಗಳು ಸಿಗಲಿವೆ ಎಂದು ಜಮೀರ್ ಹೇಳಿದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ: ಅಲ್ಪಸಂಖ್ಯಾತರ ನಿರ್ದೇಶನಾಲಯ ವ್ಯಾಪ್ತಿಯಡಿ ವಿದೇಶದಲ್ಲಿ ವ್ಯಾಸಂಗ ಮಾಡಲು ನೀಡುವ ಪ್ರೋತ್ಸಾಹ ಧನದ ಮೊತ್ತ ೨೦ ಲಕ್ಷ ರೂ.ನಿಂದ ೩೦ ಲಕ್ಷ ರೂ.ಗಳಿಗೆ ಹೆಚ್ಚಿಸಲು ಹಾಗೂ ಐಐಟಿ, ಎನ್‌ಐಟಿ ಸೇರಿದಂತೆ ಪ್ರತಿಷ್ಟಿತ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶ ಪಡೆಯುವ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹಾಲಿ ನೀಡುತ್ತಿರುವ ೨ ಲಕ್ಷ ರೂ. ಪ್ರೋತ್ಸಾಹ ಧನ ಮೊತ್ತ ೪ ಲಕ್ಷ ರೂ.ಗಳಿಗೆ ಹೆಚ್ಚಿಸಲು ಇದೇ ಸಂದರ್ಭದಲ್ಲಿ ಸಚಿವರು ಸೂಚಿಸಿದರು.
ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜು ಮತ್ತು ಮೌಲಾನಾ ಅಜಾದ್ ಮಾದರಿ ಶಾಲೆಗಳ ೯, ೧೦ ಹಾಗೂ ೧೨ನೇ ತರಗತಿಯ ಒಂದು ಲಕ್ಷ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ಸುಧಾರಿಸಲು ಸಿದ್ದಪಡಿಸಿರುವ ವಿಜ್ಞಾನ ಮತ್ತು ಗಣಿತ ಸೇರಿದಂತೆ ವಿವಿಧ ವಿಷಯಗಳ ಕೈಪಿಡಿ ಹಾಗೂ ನಿರ್ದೇಶನಾಲಯದ ಯೋಜನೆಗಳ ಕೈಪಿಡಿಯನ್ನು ಸಚಿವರು ಇದೇ ವೇಳೆ ಬಿಡುಗಡೆ ಮಾಡಿದರು. ಕಲಿಕಾ ಗುಣಮಟ್ಟ ಸುಧಾರಿಸಲು ಸಿದ್ದಪಡಿಸಿರುವ ವಿಜ್ಞಾನ ಮತ್ತು ಗಣಿತ ಸೇರಿದಂತೆ ವಿವಿಧ ವಿಷಯಗಳ ಕೈಪಿಡಿಯಲ್ಲಿ ಪ್ರತಿ ವಿಷಯದ ಬಗ್ಗೆ ಕ್ಯೂಆರ್ ಕೋಡ್ ಸಹ ಮುದ್ರಿಸಿದ್ದು, ವಿದ್ಯಾರ್ಥಿಗಳಿಗೆ ಯಾವುದಾದರೂ ವಿಷಯದ ಬಗ್ಗೆ ಹೆಚ್ಚಿನ ಮಾಹಿತಿ ಬೇಕಾದರೆ ಕ್ಯೂ ಆರ್ ಕೋಡ್ ಸ್ಕಾನ್ ಮಾಡಿದರೆ ವಿಡಿಯೋಸಮೇತ ಮಾಹಿತಿ ಲಭ್ಯ ವಾಗಲಿದೆ.
ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ನಿರ್ದೇಶನಾಲಯ ನಿರ್ದೇಶಕ ಜಿಲಾನಿ ಮೊಕಾಶಿ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ನಜೀರ್, ವಖ್ಫ್ ಮಂಡಳಿ ಕಾರ್ಯನಿರ್ವಾಹಕ ಖಾನ್ ಫರ್ವಜ್ ಇದ್ದರು.