ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಪಕ್ಷದಲ್ಲಿ ಕಡೆಗಣಿಸಿದ್ದೇ ಬಿಜೆಪಿಯಲ್ಲಿ ಶಾಪವಾಗಿ ಪರಿಣಮಿಸಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಕ್ರೋಶ ಹೊರಹಾಕಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬಲವಂತವಾಗಿ ಕೆಳಗಿಳಿಸಲಾಯಿತು. ಇದರ ಪರಿಣಾಮ ಪಕ್ಷಕ್ಕೆ ಭಾರೀ ಹಾನಿಯಾಗಿದೆ ಎಂದು ಹೇಳಿದರು.
ಕರ್ನಾಟಕದಲ್ಲಿ ನಾವು ಕಾಂಗ್ರೆಸ್ ಪಕ್ಷವನ್ನು ಕರ್ನಾಟಕ ಮುಕ್ತ ಮಾಡುತ್ತೇವೆ ಎಂದು ಹೇಳಿದ್ದೆವು. ಆದರೆ ಇಂದು ನಮ್ಮ ಪಕ್ಷಕ್ಕೆ ಅದೇ ಪರಿಸ್ಥಿತಿ ಬಂದಿದೆ ಎಂದು ಸ್ವಪಕ್ಷೀಯರ ವಿರುದ್ಧವೇ ಅವರು ಗುಡುಗಿದರು. ಕಾಂಗ್ರೆಸ್ ಪಕ್ಷ ಕರ್ನಾಟಕದಿಂದ ಮುಕ್ತವಾಗಲಿದೆ ಎಂದು ಹೇಳುತ್ತಿದ್ದೆವು. ಪರಿಸ್ಥಿತಿ ಈಗ ಉಲ್ಟಾ ಆಗಿದ್ದು, ಬಿಜೆಪಿಯೇ ಕರ್ನಾಟಕದಿಂದ ಮುಕ್ತವಾಗುತ್ತಿದೆ ಎಂದು ಅಸಮಾಧಾನ ಹೊರಹಾಕಿದರು.