ಬೆಂಗಳೂರು: ಗಣೇಶ ಚತುರ್ಥಿ ಹಿನ್ನಲೆ ಪರಿಸರ ಸ್ನೇಹಿ ಹಬ್ಬ ಆಚರಿಸಲು ಬಿಬಿಎಂಪಿ ಸಾರ್ವಜನಿಕರಿಗೆ ಸಲಹೆ ನೀಡಿದೆ. ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ನೇತೃತ್ವದಲ್ಲಿ ಪಾಲಿಕೆ ವತಿಯಿಂದ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ಮಾಡಿದ್ದು, ಕೆಲ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ೬೩ ಉಪ ವಿಭಾಗ ಕಛೇರಿಗಳಲ್ಲಿ ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚನೆ ಮಾಡಲಾಗುವುದು.
ಪ್ರತಿ ವರ್ಷದಂತೆ ಪಾಲಿಕೆ ವತಿಯಿಂದ ಗಣೇಶ ವಿಸರ್ಜನೆಗೆ ನಗರದ ಕೇಂದ್ರ ಭಾಗದಲ್ಲಿ ವ್ಯವಸ್ಥೆ ಮಾಡಲಾಗುತ್ತಿದ್ದು, ಸ್ಯಾಂಕಿ ಕೆರೆ, ಹಲಸೂರು ಕೆರೆ, ಯಡಿಯೂರು ಕೆರೆ, ಹೆಬ್ಬಾಳ ಕೆರೆ ಹಾಗೂ ಇತರೆ ಪ್ರಮುಖ ಕೆರೆ, ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ವಿಸರ್ಜನಾ ಕೇಂದ್ರಗಳಲ್ಲಿ ಸಂಗ್ರಹವಾಗುವ ಪೂಜಾ ಸಾಮಗ್ರಿಗಳಾದ ಹೂವು, ಬಾಳೆಯ ಕಂದು, ತಳಿರು ತೋರಣ, ಮತ್ತಿತರ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ನಿಗದಿತ ಕಂಟೈನರ್‌ಗಳ ಮೂಲಕ ಆವಾಗಲೇ ತೆರವುಗೊಳಿಸಲು ಅಗತ್ಯ ಸ್ವಚ್ಛತಾ ಸಿಬ್ಬಂದಿ ಹಾಗೂ ಸಾಗಣೆ ವಾಹನಗಳನ್ನು ಸಜ್ಜುಗೊಳಿಸಲು ಸೂಚಿಸಲಾಗಿದೆ.
ಪಾಲಿಕೆ ವ್ಯಾಪ್ತಿಯಲ್ಲಿ ರಾಸಾಯನಿಕ ಬಣ್ಣಗಳು, ಥರ್ಮಕೊಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣೇಶ ಮೂರ್ತಿ ತಯಾರಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ರಾಸಾಯನಿಕ ಬಣ್ಣಗಳು, ಥರ್ಮಕೊಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಸ್ತುಗಳನ್ನು ಬಳಸಿ ಗಣೇಶ ಮೂರ್ತಿ ತಯಾರಿಕೆ ಮಾಡುತ್ತಿರುವವರಿಗೆ ದಂಡ ವಿಧಿಸುವ ಜೊತೆಗೆ ಸೂಕ್ತ ಕ್ರಮವಹಿಸಲು ಸೂಚಿಸಲಾಗಿದೆ.
ಗಣೇಶ ಮೂರ್ತಿಯ ಪ್ರತಿಷ್ಠಾಪನೆ, ವಿಸರ್ಜನೆ, ಸ್ವಚ್ಛತೆ ಕಾಪಾಡುವ ಹಾಗೂ ಇನ್ನಿತರೆ ಸೂಚನೆಗಳನ್ನು ಕಡ್ಡಾಯವಾಗಿ ಅನುಮತಿಯ ಆದೇಶ ಪತ್ರದಲ್ಲಿ ವಿವರಣೆ ಸಮೇತ ಆದೇಶ ನೀಡುವಂತೆ ಅಧಿಕಾರಿಗಳಿಗೆ ತಿಳಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಫೆಕ್ಸ್, ಬ್ಯಾನರ್ ಅಳವಡಿಸುವುದು ಹಾಗೂ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದ್ದು, ಸಾರ್ವಜನಿಕರು ಸಹಕರಿಸಲು ಬಿಬಿಎಂಪಿ ಆಯುಕ್ತರಿಂದ ಮನವಿ ಮಾಡಲಾಗಿದೆ.