ಚಾಮರಾಜನಗರ: ಜಿಲ್ಲೆಯಲ್ಲಿ ಬಾಕಿ ಇರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಿ ಅಗತ್ಯ ಪರಿಹಾರ ಒದಗಿಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಸಿ.ಟಿ ಶಿಲ್ಪಾನಾಗ್ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ದೌರ್ಜನ್ಯ ಪ್ರತಿಬಂಧ ಕಾಯ್ದೆ-1995 ಸೆಕ್ಷನ್ 4(2)ರಡಿ ದಾಖಲಿಸಲ್ಪಟ್ಟ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣಗಳ ವಿಲೇವಾರಿ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಾದ್ಯಂತ 2015ರಿಂದ 2023ರವರೆಗೆ ಒಟ್ಟು 114 ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣಗಳು ಬಾಕಿಯಾಗಿದ್ದು, ಇವುಗಳನ್ನು ಆದ್ಯತೆ ಮೇರೆಗೆ ವಿಲೇವಾರಿಗೆ ಅಧಿಕಾರಿಗಳು ಮುಂದಾಗÀಬೇಕು. ಪ್ರತಿ ತಾಲೂಕಿನಲ್ಲಿ ಬಾಕಿ ಇರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಪ್ರಕರಣಗಳನ್ನು ಗುರುತಿಸಿ ಸರಿಯಾದ ಸಾಕ್ಷ್ಯಧಾರಗಳನ್ನು ಒದಗಿಸಿ ಪ್ರಕರಣ ಇತ್ಯರ್ಥಕ್ಕೆ ಹೆಚ್ಚು ಒತ್ತು ನೀಡಬೇಕು ಎಂದರು.
ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಪ್ರಕರಣಗಳನ್ನು ಪೂರ್ಣ ಪ್ರಮಾಣದಲ್ಲಿ ಅರಿತು ಸಾಕ್ಷ್ಯಗಳನ್ನು ಒದಗಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ಕಾಯ್ದೆಯ ಅಡಿಯಲ್ಲಿ ಜನರಿಗೆ ನ್ಯಾಯ ನೀಡುವ ನಿಟ್ಟಿನಲ್ಲಿ ಯಾರು ಸಹ ವಂಚಿತವಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸಮಿತಿಯ ಎಲ್ಲರೂ ಕಾರ್ಯ ನಿರ್ವಹಿಸಬೇಕು. ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣಗಳ ಇತ್ಯರ್ಥವಾದ ವರದಿಯನ್ನು ಸಿದ್ದಪಡಿಸುವಂತೆ ಜಿಲ್ಲಾಧಿಕಾರಿಯವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಅವರು ಮಾತನಾಡಿ ಜಿಲ್ಲೆಯಲ್ಲಿ ನಡೆಯುವ ದೌರ್ಜನ್ಯ ಪ್ರಕರಣಗಳ ವಿಲೇವಾರಿಗೆ ವರದಿ ಸಿದ್ಧಪಡಿಸಿ ಅಧಿಕಾರಿಗಳ ಜೊತೆ ಚರ್ಚಿಸಲಾಗುವುದು. ಪೊಲೀಸ್ ಕಚೇರಿಯಲ್ಲಿ ಪ್ರತಿ ತಿಂಗಳು ಕ್ರೈಮ್ ಮಾನಿಟರಿಂಗ್ ಸೆಲ್ ಸ್ಥಾಪಿಸಿ ಪ್ರಕರಣವಾರು ಸವಿವರವಾಗಿ ಪರಿಶೀಲನೆ ನಡೆಸಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣಗಳ ವಿಲೇವಾರಿಗೆ ಪ್ರಾಮುಖ್ಯತೆ ನೀಡಲಾಗುವುದು ಎಂದರು.
ಇದೇ ವೇಳೆ ಜಿಲ್ಲಾ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರಾದ ರಘು ಅವರು ಮಾತನಾಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರಕರಣಗಳ ಇತ್ಯರ್ಥಪಡಿಸಲು ಅಧಿಕಾರಿಗಳ ಸಹಕಾರ ಉತ್ತಮವಾಗಿದೆ. ಜಿಲ್ಲೆಯಲ್ಲಿರುವ ಒಂದೇ ನ್ಯಾಯಾಲಯಕ್ಕೆ ಎಲ್ಲಾ ಬಗೆಯ ಪ್ರಕರಣಗಳು ದಾಖಲಾಗುತ್ತಿರುವುದರಿಂದ ಪ್ರಕರಣಗಳು ಶೀಘ್ರ ವಿಲೇವಾರಿಗೆ ವಿಳಂಬವಾಗುತ್ತಿದೆ. ಬೇರೆ ನ್ಯಾಯಾಲಯದಲ್ಲಿ ಸದರಿ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಉಚ್ಛನ್ಯಾಯಾಲಯದ ಅನುಮತಿ ಬೇಕಾಗಿದೆ ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ್ದ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ಈ ಸಂಬಂಧ ಸೂಕ್ತ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲು ಕಾನೂನು ಇಲಾಖೆಯಿಂದ ಅಗತ್ಯ ಅನುಮತಿ ಪಡೆಯಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಲ್ಲಿಕಾರ್ಜುನ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ರಾಮಚಂದ್ರರಾಜೇ ಅರಸ್, ಜಿಲ್ಲಾ ಪರಿಶಿಷ್ಠ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳ, ಚಾಮರಾಜನಗರ ಡಿವೈಎಸ್‍ಪಿ ಲಕ್ಷ್ಮಯ್ಯ, ಕೊಳ್ಳೇಗಾಲ ಡಿವೈಎಸ್‍ಪಿ ಸೋಮಣ್ಣಯ್ಯ, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.